

ಸೋಮವಾರಪೇಟೆ ಆ.28 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಗಾಂಧಿ ಪ್ರತಿಮೆಯಿಂದ ಮೆರವಣಿಗೆ ಹೊರಟ ನೂರಾರು ಪ್ರತಿಭಟನಾಕಾರರು ಕ್ಷೇತ್ರದ ಪರವಾಗಿ ಜಯಘೋಷ ಮೊಳಗಿಸಿದರು. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ಧಿಕ್ಕಾರ ಕೂಗಿ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಜೇಸಿ ವೇದಿಕೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮುಳ್ಳೂರು ಮಠದ ಮಠಾಧೀಶರಾದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಅಸಂಖ್ಯಾತ ಹಿಂದುಗಳ ಬಗ್ಗೆ ಗೌರವಿದ್ದರೆ, ಕನ್ನಡಿಗರ ಮತ್ತು ಜನರ ಭಾವನೆಗಳಿಗೆ ಬೆಲೆ ಕೊಡುವ ಮನಸ್ಥಿತಿ ಇದ್ದರೆ ಶ್ರೀ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ಐಟಿ ತನಿಖೆಯನ್ನು ನಿಲ್ಲಿಸಬೇಕು. ಕೂಡಲೇ ಕೇಂದ್ರಿಯ ತನಿಖಾದಳದಿಂದ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಆರ್ಎಸ್ಎಸ್ ಬಗ್ಗೆ ಮಾತನಾಡಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿರೋಧ ವ್ಯಕ್ತಪಡಿಸಿ ಪ್ರಧಾನಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಈಗ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರ್ಎಸ್ಎಸ್ ಗೀತೆಯನ್ನು ಸದನದಲ್ಲಿ ಹಾಡಿದ್ದಾರೆ. ತಾಕತ್ತು ಇದ್ದರೆ, ಉಪಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲಿ ಎಂದು ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದರು. ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಶ್ರೀಕ್ಷೇತ್ರದ ಮೇಲೆ ನಿರಂತರ ಅಪಪ್ರಚಾರ ನಡೆಸುತ್ತಿರುವ ಸಮಾಜ ದ್ರೋಹಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು. ವೇದಿಕೆಯಲ್ಲಿ ಜಿಲ್ಲಾ ಜನಜಾಗೃತಿ ಸಮಿತಿ ಅಧ್ಯಕ್ಷ ರಂಗಸ್ವಾಮಿ, ಉಪಾಧ್ಯಕ್ಷ ಪುಂಡರೀಕ, ಕುರುಹಿನ ಶೆಟ್ಟಿ ಸಮಾಜದ ಅಧ್ಯಕ್ಷ ರಾಮಶೆಟ್ಟಿ, ವಿರಕ್ತ ಮಠಾಧೀಶರಾದ ನಿಶ್ಚಲ ನಿರಂಜನ ದೇಶೀಕೇಂದ್ರ ಸ್ವಾಮೀಜಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ವಕೀಲ ಕಾಟ್ನಮನೆ ವಿಠಲ್ ಗೌಡ, ವೇದಿಕೆಯ ಅಧ್ಯಕ್ಷ ಎಸ್.ಆರ್. ಸೋಮೇಶ್, ಸಂಚಾಲಕ ಸುರೇಶ್ ಸೇರಿದಂತೆ ಇತರರು ಇದ್ದರು.









