ಮಡಿಕೇರಿ ಸೆ.1 NEWS DESK : ಕೊಡಗು ಜಿಲ್ಲೆಯಲ್ಲಿ ಮತಾಂತರದ ಪಿಡುಗು ಗುಪ್ತವಾಗಿ ವ್ಯಾಪಿಸುತ್ತಿದ್ದು, ಮತಾಂತರ ಮಾಡುವವರನ್ನು ಪೊಲೀಸ್ ಇಲಾಖೆ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚೆಗೆ ಗೋಣಿಕೊಪ್ಪಲಿನ ಖಾಸಗಿ ಶಾಲೆಯೊಂದರಲ್ಲಿ ಮತಾಂತರದ ಚಟುವಟಿಕೆ ನಡೆಯುತ್ತಿದೆ ಎನ್ನುವ ಆರೋಪದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅಲ್ಲದೆ ತೀವ್ರ ಚರ್ಚೆಗೆ ಗ್ರಾಸವಾಗಿದೆ ಮತ್ತು ಮತಾಂತರಕ್ಕೆ ಕುಮ್ಮಕ್ಕು ನೀಡುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತಾಂತರ ವಿರೋಧಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಧರ್ಮ ಪ್ರಚಾರದ ಹಕ್ಕಿನಲ್ಲಿ ಇತರರನ್ನು ಮತಾಂತರಿಸುವ ಹಕ್ಕು ಸೇರಿಲ್ಲ ಎಂದು ಈಗಾಗಲೇ ತೀರ್ಪು ನೀಡಿದೆ. ನೇರವಾಗಿ ಅಥವಾ ಪರೋಕ್ಷವಾಗಿ ಮತಾಂತರದಲ್ಲಿ ಭಾಗಿಯಾಗುವುದು ಅಪರಾಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾನೂನನ್ನು ಮೀರಿ ಕೊಡಗು ಜಿಲ್ಲೆಯಲ್ಲಿ ಮತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಇದು ಶಾಂತಿ ಕದಡುವ ಪ್ರಯತ್ನವಾಗಿದೆ. ಗೋಣಿಕೊಪ್ಪಲಿನ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಸಂಬಂಧಪಟ್ಟವರನ್ನು ವಿಚಾರಣೆಗೆ ಒಳಪಡಿಸಿ ಸತ್ಯಾಸತ್ಯತೆಯನ್ನು ಜನರ ಮುಂದಿಡಬೇಕು. ಮತಾಂತರ ನಡೆಯುತ್ತಿರುವುದು ನಿಜವೇ ಆಗಿದ್ದಲ್ಲಿ ಇದರಲ್ಲಿ ಭಾಗಿಗಳಾಗಿರುವವರನ್ನು ಗಡಿಪಾರು ಮಾಡಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.










