

ಮಡಿಕೇರಿ NEWS DESK ಸೆ.4 : ಮತಾಂತರ ಪಿಡುಗಿನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಪರಿವಾರ ಸಂಘಟನೆಯ ಪ್ರಮುಖರು ಗೋಣಿಕೊಪ್ಪದಲ್ಲಿ ಪ್ರತಿಭಟನಾ ಜಾಥ ನಡೆಸಿದರು. ಶ್ರೀ ಮಹಾಲಕ್ಷ್ಮಿ ದೇವಾಲಯದ ಆವರಣದಿಂದ ಆತೂರು ವರೆಗೆ ಜಾಥಾ ನಡೆಸಿದ ಪ್ರತಿಭಟನಾಕಾರರು ಇತ್ತೀಚೆಗೆ ಖಾಸಗಿ ಶಾಲೆಯ ಸಭಾಂಗಣವೊಂದರಲ್ಲಿ ಮತಾಂತರದ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು. ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿಣಿಯ ಪ್ರಮುಖ ಕುಕ್ಕೇರ ಅಜಿತ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಮತಾಂತರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಖಾಸಗಿ ಶಾಲೆಯ ಸಭಾಂಗಣದಲ್ಲಿ ನಡೆದ ಮತಾಂತರ ಪ್ರಯತ್ನದ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ವಿಶ್ವ ಹಿಂದೂ ಪರಿಷತ್, ಪರಿವಾರ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡು ಮತಾಂತರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.










