
ಸುಂಟಿಕೊಪ್ಪ ಸೆ.5 NEWS DESK : ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಗಳನ್ನು ರಚಿಸಲಾಗಿದ್ದು, ಸಂಘಟನೆಯು ಕಾರ್ಯನ್ಮೋಖವಾಗುವುದರಿಂದ ವಿದ್ಯಾರ್ಥಿಗಳ ಪ್ರತಿಭೆಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಸ್ವಾಗತ 2025-26ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಮತ್ತು ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿರುವ ಸುಪ್ತಪ್ರತಿಭೆಯನ್ನು ಹೊರತರಲು ಮತ್ತು ಅನಾವರಣಗೊಳಿಸಲು ಸೂಕ್ತ ವೇದಿಕೆಯನ್ನು ಕಾರ್ಯಕ್ರಮಗಳು ಒದಗಿಸುತ್ತವೆ ಎಂದು ಅವರು ಹೇಳಿದರು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಸೈಮನ್ ಡಿಕುನ್ಹ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಏಕಾಗ್ರಚಿತ್ತದಿಂದ ಅಧ್ಯಯನದಲ್ಲಿ ತೊಡಗಿಸಿಕೊಂಡು ನಿರ್ದಿಷ್ಠ ಗುರಿಯೊಂದಿಗೆ ಮುನ್ನಡೆಯುತ್ತಾ ಸಾಧಕರಾಗಿ ಹೊರಹೊಮ್ಮಬೇಕೆಂದು ಹೇಳಿದರು. 2025-26ನೇ ಸಾಲಿನ ವಿದ್ಯಾರ್ಥಿಗಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಪದಾಧಿಕಾರಿಗಳಿಗೆ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಸುನೀತಾ ಗಿರೀಶ್ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. 2024-25ನೇ ಸಾಲಿನಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರವನ್ನು ಪ್ರಾಂಶುಪಾಲರು ನೆರವೇರಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವಿಧ ವಿನೋದಭರಿತ ಚಟುವಟಿಕೆಗಳಲ್ಲಿ ಸ್ಪರ್ಧಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಮಾರಂಭದ ಮೊದಲಿಗೆ ಗ್ರೀಷ್ಮಾ ಸ್ವಾಗತಿಸಿ, ನಿಮಿಷಾ ಪ್ರಾಸ್ತಾವಿಕ ನುಡಿಗಳಾನ್ನಾಡಿ, ಶಿಷಾ ಮತ್ತು ಶಾಕೀರ ನಿರೂಪಿಸಿದರು.








