
ಮಡಿಕೇರಿ ಸೆ.6 NEWS DESK : ಪತ್ರಕರ್ತೆಯೊಬ್ಬರು ಸಾಮಾಜಿಕ ಕಳಕಳಿಯಿಂದ ಕೇಳಿದ ಪ್ರಶ್ನೆಗೆ ಸಚಿವ ಆರ್.ವಿ.ದೇಶಪಾಂಡೆ ಅವರು ಉಡಾಫೆ ಉತ್ತರ ನೀಡಿದ್ದಾರೆ ಹಾಗೂ ಪ್ರಧಾನಿ ನರೇಂದ್ರಮೋದಿಯವರ ತಾಯಿಯನ್ನು ಆರ್‍ಜೆಡಿ ಮತ್ತು ಕಾಂಗ್ರೆಸ್ ರ್ಯಾಲಿಯಲ್ಲಿ ನಿಂದಿಸಲಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿತು. ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ಅನಿತಾ ಪೂವಯ್ಯ ಮಾತನಾಡಿ, ಮಹಿಳಾ ಪತ್ರಕರ್ತರೊಬ್ಬರ ಪ್ರಶ್ನೆಗೆ ಸಚಿವ ಆರ್.ವಿ.ದೇಶಪಾಂಡೆ ಅವರು ಲೇವಡಿಯಿಂದ ಪ್ರತಿಕ್ರಿಯಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರಿಗೆ ತಾಯ್ತನದ ಬಗ್ಗೆ ಅರಿವಿಲ್ಲವೆ ಎಂದು ಪ್ರಶ್ನಿಸಿದರು. ಮಹಿಳೆಯರ ಅನುಕೂಲಕ್ಕಾಗಿ ಆಸ್ಪತ್ರೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ಕೇಳಿದ ಪ್ರಶ್ನೆಗೆ ಸಚಿವರು ನೀಡಿರುವ ಉತ್ತರ ಇಡೀ ಸ್ತ್ರೀ ಕುಲಕ್ಕೆ ಮಾಡಿರುವ ಅವಮಾನವಾಗಿದೆ ಎಂದು ಆರೋಪಿಸಿದರು. ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ದೇಶಪಾಂಡೆ ಅವರು ಕ್ಷಮೆಯಾಚನೆ ಮಾಡಬೇಕು ಹಾಗೂ ಇವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು. ಬಿಹಾರದಲ್ಲಿ ಪ್ರಧಾನಮಂತ್ರಿ ಮೋದಿಯವರ ತಾಯಿಯ ಬಗ್ಗೆ ಅತ್ಯಂತ ಕೀಳುಮಟ್ಟದ ಪದಗಳಿಂದ ಟೀಕಿಸಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರ ಬಗ್ಗೆ ಗೌರವವಿಲ್ಲದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಬಿ.ಕೆ.ಜಗದೀಶ್, ಉಮಾಪ್ರಭು, ಸಬಿತಾ, ಶ್ವೇತಾ ಪ್ರಶಾಂತ್, ಮಂಜುಳ ಮತ್ತಿತರರು ಪಾಲ್ಗೊಂಡಿದ್ದರು.









