

ಸೋಮವಾರಪೇಟೆ NEWS DESK ಸೆ.8 : ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಭಾನುಮುಷ್ತಾಕ್ ಆಹ್ವಾನ ವಿರೋಧಿಸಿ ಇಂದು ಸೋಮವಾರಪೇಟೆ ಮಂಡಲ ಬಿಜೆಪಿ ಪ್ರತಿಭಟನೆ ನಡೆಸಿತು. ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ ದಸರಾ ಉದ್ಘಾಟನೆಗೆ ಕನ್ನಡ ವಿರೋಧಿ ಭಾನು ಮುಷ್ತಾಕ್ ರವರನ್ನು ಆಹ್ವಾನಿಸುವ ಮೂಲಕ ರಾಜ್ಯ ಸರಕಾರ ಈ ನಾಡಿನ ಅಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನಾಡದೇವತೆ ಚಾಮುಂಡೇಶ್ವರಿ ದೇವಾಲಯ ಹಿಂದೂಗಳದಲ್ಲಾ ಎನ್ನುವ ಮೂಲಕ ಈ ನಾಡಿಗೆ ಹಾಗೂ ರಾಜಮನೆತನಕ್ಕೆ ಅಗೌರವ ತೋರಿದ್ದಾರೆ ಎಂದರು. ಭಾನು ಮುಷ್ತಾಕ್ ಈ ನಾಡಿನ ಸಂಪ್ರದಾಯದಂತೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಮಾಡುವುದಾದರೆ ಮಾತ್ರ ಮಾಡಲಿ ಇಲ್ಲವಾದರೆ ನಮ್ಮ ತೀವ್ರ ವಿರೋಧವಿದೆ ಎಂದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಮಾತನಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುವ ಮೂಲಕ ಒಂದಲ್ಲಾ ಒಂದು ಯಡವಟ್ಟು ಮಾಡುತ್ತಿದೆ. ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ವಿವಾದಗಳನ್ನು ಹೊರತಂದು ಜನರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಉಪಾಧ್ಯಕ್ಷರು ಗಳಾದ ಮನುಕುಮಾರ್ ರೈ, ಮಾದಪ್ಪ, ಮಂಡಲ ಅಧ್ಯಕ್ಷ ಗೌತಮ್, ಕಾರ್ಯದರ್ಶಿ ದರ್ಶನ್, ಇಂದಿರಾ ಮೋನಪ್ಪ, ಮೋಕ್ಷಿತ್ ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.










