
ಮಡಿಕೇರಿ NEWS DESK ಸೆ.20 : ವಿರಾಜಪೇಟೆಯ ಗಾಂಧಿನಗರದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದು ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಹೆಸರಿನಲ್ಲಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಬಳಕೆ ಮಾಡುತ್ತಿದ್ದ ಆರೋಪದಡಿ ವಿರಾಜಪೇಟೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕೇರಳ ಕಣ್ಣೂರು ಜಿಲ್ಲೆಯ ಪಿ.ಪಿ.ಪ್ರದೀಪನ್(48), ಕಲೇಶ್ ಕುಮಾರ್(45), ಶಾಜಿ(38) ಹಾಗೂ ವಿರಾಜಪೇಟೆ ಅಮ್ಮತ್ತಿ ನಿವಾಸಿ ಪೊನ್ನಣ್ಣ(48) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ದಾಳಿ ವೇಳೆ ಸ್ಥಳದಲ್ಲಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಶಾಮೀಲಾಗಿರುವ ಇತರರ ಬಂಧನಕ್ಕೆ ಬಲೆ ಬೀಸಲಾಗಿದೆ. ಆರೋಪಿಗಳ ವಿರುದ್ದ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿರಾಜಪೇಟೆ ಡಿವೈಎಸ್‌ಪಿ ಮಹೇಶ್ ಕುಮಾರ್, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಠಾಣಾಧಿಕಾರಿ ಎನ್.ಜೆ.ಲತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.








