
ಮಡಿಕೇರಿ NEWS DESK ಸೆ.25 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ಸರ್ವ ಅರೆಭಾಷೆ ಗೌಡರು ನಮೂದಿಸಬೇಕೆಂದು ಯಲಹಂಕ ಗೌಡ ಸಮಾಜದ ಅಧ್ಯಕ್ಷ ಕುಂಞಳಿಯನ ಅಜಿತ್ ಕುಮಾರ್ ಅವರು ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಉಪಜಾತಿ ಎನ್ನುವ ಕಾಲಂನಲ್ಲಿ ಅರೆಭಾಷೆ ಗೌಡ ಎಂದು ಸೂಚಿಸಬೇಕು. ಅರೆಭಾಷೆ ಗೌಡ ಸಮುದಾಯ ಬಾಂಧವರು ಈ ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಕಡ್ಡಾಯವಾಗಿ ರಾಜ್ಯ ಮತ್ತು ಕೇಂದ್ರದ ಗಣತಿಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಮೂಲತಃ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ. ಆದರೆ ಅರೆಭಾಷೆ ಗೌಡರ ಶೈಕ್ಷಣಿಕ ಮತ್ತು ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ಗೌಡ ಎಂದೇ ನಮೂದಾಗಿರುವುದರಿಂದ ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಚರ್ಚಿಸಿ ಗಣತಿ ಸಂದರ್ಭ GOWDA (ಗೌಡ) ಎಂದು ನಮೂದಿಸಲು ಕೊಡಗು ಗೌಡ ಸಮಾಜಗಳ ಒಕ್ಕೂಟ ನಿರ್ಣಯ ಕೈಗೊಂಡಿದೆ. ಇದಕ್ಕೆ ಯಲಹಂಕ ಗೌಡ ಸಮಾಜ ಸಂಪೂರ್ಣ ಬೆಂಬಲ ಸೂಚಿಸಿದೆ ಎಂದು ತಿಳಿಸಿದ್ದಾರೆ. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಸಹ ಇದ್ದು, ಅಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಅವರು ಕೇಳಿ ಕೊಂಡಿದ್ದಾರೆ. ಹಾಗೆಯೇ ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದಲ್ಲಿ ಅವರುಗಳು ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆಭಾಷೆ ಎಂದು ನಮೂದಿಸಲು ಯಾವುದೇ ಅಭ್ಯಂತರವಿರುವುದಿಲ್ಲವೆಂದು ಕುಂಞಳಿಯನ ಅಜಿತ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.








