
ಮಡಿಕೇರಿ ಸೆ.27 : ಪ್ರಸ್ತುತ ನಡೆಯುತ್ತಿರುವ ಮತ್ತು ಮುಂದೆ ನಡೆಯಲಿರುವ ಜಾತಿ ಜನಗಣತಿಯ ಸಂದರ್ಭ ಕೊಡಗಿನ ಸರ್ವ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಬೆಂಗಳೂರಿನ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಬೆಂಗಳೂರು ಅಧ್ಯಕ್ಷ ಪಾಣತ್ತಲೆ ಪಳಂಗಪ್ಪ ಅವರು ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ GOWDA (ಗೌಡ) ಎಂದು ನಮೂದಿಸಲು ನಿರ್ಣಯ ಕೈಗೊಂಡಿದ್ದು, ಇದಕ್ಕೆ ಬೆಂಗಳೂರಿನ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಸಮುದಾಯ ಬಾಂಧವರು ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಉಪಜಾತಿ ಎನ್ನುವ ಕಾಲಂನಲ್ಲಿ ‘ಅರೆಭಾಷೆ ಗೌಡ’ ಎಂದು ನಮೂದಿಸಬೇಕು ಮತ್ತು ಕಡ್ಡಾಯವಾಗಿ ಎರಡೂ ಗಣತಿಯಲ್ಲಿ ಪಾಲ್ಗೊಳ್ಳಬೇಕು. ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದರೆ, ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆಭಾಷೆ ಎಂದು ನಮೂದಿಸಲು ಯಾವುದೇ ಅಭ್ಯಂತರವಿರುವುದಿಲ್ಲ ಎಂದು ಪಾಣತ್ತಲೆ ಪಳಂಗಪ್ಪ ಸ್ಪಷ್ಟಪಡಿಸಿದ್ದಾರೆ.







