
ಮಡಿಕೇರಿ ಅ.14 NEWS DESK : ಕೊಡವ ಜನಾಂಗದವರು ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ಸಹ ಕ್ರೀಡೆ, ಸೇನೆ, ಜ್ಞಾನ, ಬುದ್ಧಿವಂತಿಗೆ ಹೀಗೆ ಹಲವಾರು ವಿಷಯಗಳಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತಾ ಮುಂಚೂಣಿಯಲ್ಲಿ ಇದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ವಿರಾಜಪೇಟೆ ಕಾವೇರಿ ಕೊಡವಕೇರಿ ವತಿಯಿಂದ ನಡೆದ 4ನೇ ವರ್ಷದ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೊಡವ ಜನಾಂಗದವರ ಸಂಸ್ಕೃತಿ ವಿಭಿನ್ನವಾಗಿದ್ದು, ನಮ್ಮ ಆಚಾರ ವಿಚಾರಗಳು ವಿಶಿಷ್ಟ ರೀತಿಯಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಮ್ಮ ಈ ಇತಿಹಾಸ, ಪರಂಪರೆಯನ್ನು ಪೋಷಿಸಿ ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವಂತಹ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾನು ಅಧಿಕಾರಕ್ಕೆ ಬಂದ ಬಳಿಕ ಕೊಡವ ಜನಾಂಗದವರ ಹಲವಾರು ಹಕ್ಕುಗಳಿಗೆ ಹೋರಾಟ ಮಾಡುತ್ತಿದ್ದು, ಕೋವಿ ವಿಷಯದಲ್ಲಿ ಪೂರಕವಾಗಿ ಆದೇಶ ಬರುವಂತೆ ನೋಡಿಕೊಂಡಿದ್ದೇನೆ. ಯುವ ಜನತೆಗೆ ಅನುಕೂಲವಾಗಲಿ ಎಂದು ಜಿಲ್ಲೆ ಹಾಗೂ ವಿರಾಜಪೇಟೆ ಕ್ಷೇತ್ರದಾದ್ಯಂತ ಕ್ರೀಡೆಯ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಆದ್ಯತೆ ನೀಡುತ್ತಿರುವುದಾಗಿ ತಿಳಿಸಿದರು.ಕಾವೇರಿ ಕೊಡವ ಕೇರಿಯವರು ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಹಾಗೂ ವಿನೂತನ ರೀತಿಯಲ್ಲಿ ಸಮಾಜಕ್ಕೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ, ಕೊಡವ ಸಮಾಜದ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.









