
ಮಡಿಕೇರಿ NEWS DESK ಅ.16 : ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಸಿದ್ಧತೆಯನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಗುರುವಾರ ಪರಿಶೀಲಿಸಿದರು. ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ತ್ರಿವೇಣಿ ಸಂಗಮ ಭೇಟಿ ನೀಡಿ ವೀಕ್ಷಿಸಿದರು, ಬಳಿಕ ತಲಕಾವೇರಿಯಲ್ಲಿನ ಸಿದ್ಧತೆ ಪರಿಶೀಲಿಸಿದರು. ಭಕ್ತಾದಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಎಚ್ಚರವಹಿಸುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ತಕ್ಕ ಮುಖ್ಯಸ್ಥರು, ಇತರರು ಇದ್ದರು.









