ಕುಶಾಲನಗರ ಅ.20 NEWS DESK : ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸುವ ಕುರಿತಂತೆ ಜಿಲ್ಲಾಡಳಿತ, ಜಿ.ಪಂ.,ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಕುಶಾಲನಗರ ಪುರಸಭೆ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ವತಿಯಿಂದ
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ,ಭಾರತ್ ಸ್ಕೌಟ್ಸ್ ,ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಎನ್.ಎಸ್.ಎಸ್.ಘಟಕದ ಸಂಯುಕ್ತಾಶ್ರಯದಲ್ಲಿ ಶನಿವಾರ (ಅ.19 ರಂದು ) ಕುಶಾಲನಗರ ಪಟ್ಟಣದ ಫಾತಿಮ ಪ್ರೌಢಶಾಲೆಯಲ್ಲಿ ನೇಸರ ಇಕೋ ಕ್ಲಬ್ ನ ಸಹಯೋಗದೊಂದಿಗೆ ‘ನಮ್ಮ ನಡೆ ಹಸಿರೆಡೆಗೆ: ಗೋ ಗ್ರೀನ್ *ಅಭಿಯಾನದಡಿ ಸ್ವಚ್ಛ, ಸ್ವಸ್ಥ ಹಾಗೂ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ’ ಕುರಿತಂತೆ ಪರಿಸರ ಜಾಗೃತಿ ಆಂದೋಲನ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಹಸಿರು ದೀಪಾವಳಿ ಆಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ , ನಾವು ಪರಿಸರಕ್ಕೆ ಯಾವುದೇ ರೀತಿಯಲ್ಲೂ ಹಾನಿಯುಂಟು ಮಾಡುವ ಪಟಾಕಿಯನ್ನು ತ್ಯಜಿಸುವ ಮೂಲಕ ಉತ್ತಮ ಪರಿಸರ ಸಂರಕ್ಷಣೆಗಾಗಿ ನಾವು ಸ್ವಚ್ಛ ಸ್ವಸ್ಥ ಹಾಗೂ ಹಸಿರು ದೀಪಾವಳಿ ಆಚರಣೆ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದರು. ವಿದ್ಯಾರ್ಥಿಗಳು ಅಪಾಯಕಾರಿ ಪಟಾಕಿ ತ್ಯಜಿಸಿ ಹಣತೆ ಬೆಳಗಿಸುವ ಮೂಲಕ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ
ಹಸಿರು ದೀಪಾವಳಿ ಆಚರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಮಕ್ಕಳಿಗೆ ‘ಹಣತೆ ಹಚ್ಚೋಣ ಬನ್ನಿ, ಪರಿಸರಸ್ನೇಹಿ ಹಸಿರು ದೀಪಾವಳಿ ಆಚರಿಸೋಣ ಬನ್ನಿ’ ಎಂದು ಬಿಇಓ ಕೃಷ್ಣಪ್ಪ ಪ್ರತಿಜ್ಞಾವಿಧಿ ಬೋಧಿಸಿದರು. ಹಣತೆ (ದೀಪ) ಬೆಳಗಿಸುವ ಮೂಲಕ ಕಾರ್ಯಕ್ರಮಕ ಚಾಲನೆ ನೀಡಿದ ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಬಿ.ಆರ್.ನಾಗೇಂದ್ರಪ್ರಸಾದ್ ಮಾತನಾಡಿ, ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಣೆ ಮಾಡಬೇಕು. ಮಾಲಿನ್ಯವನ್ನುಂಟು ಮಾಡುವ ಪಟಾಕಿ ಸಿಡಿಸುವುದರಿಂದಾಗುವ ಅನಾಹುತದ ಬಗ್ಗೆ ಎಲ್ಲರಿಗೂ ಮನವರಿಕೆ ಮಾಡಬೇಕು. ಜತೆಗೆ ಪರಿಸರದ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ತಿಳಿಹೇಳಬೇಕು ಎಂದರು. ಜಿಲ್ಲೆಯಲ್ಲಿ ಪರಿಸರ ಸ್ವಚ್ಛತೆಗಾಗಿ ಸ್ವಚ್ಛ ಕೊಡಗು- ಸುಂದರ ಕೊಡಗು ಅಭಿಯಾನದಿಂದ
ಹಮ್ಮಿಕೊಂಡಿದ್ದ ಬೃಹತ್ ಸ್ವಚ್ಛತಾ ಆಂದೋಲನನವು ಜನರಲ್ಲಿ ಸ್ವಚ್ಚತೆ ಮೂಲಕ ಅರಿವು ಮೂಡಿಸಲು ಸಹಕಾರಿಯಾಗಿದೆ. ಹಾಗೆಯೇ, ದೀಪಾವಳಿ ಸಂದರ್ಭದಲ್ಲಿ ಸಿಡಿಸುವ ಪಟಾಕಿ ತ್ಯಾಜ್ಯ ಉತ್ಪತ್ತಿಯಿಂದ ಪರಿಸರಕ್ಕೆ ತೀವ್ರ ಧಕ್ಕೆಯಾಗಲಿದೆ. ಆದ್ದರಿಂದ, ಸ್ವಚ್ಛ ಹಾಗೂ ಸ್ವಸ್ಯ ದೀಪಾವಳಿ ಆಚರಿಸುವ ಮೂಲಕ ಪರಿಸರ ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಹಸಿರು ದೀಪಾವಳಿ ಆಚರಣೆಯ ಮಹತ್ವದ ‘ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ
ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸಿಡಿಮದ್ದು ಸಿಡಿಸುವುದರಿಂದ ಪರಿಸರ ಮತ್ತು ಆರೋಗ್ಯಕ್ಕೆ ಹಾನಿ ಹಾಗೂ ಮಾಲಿನ್ಯದ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಅಂಧತ್ವದ ಅಪಾಯಗಳನ್ನು ಸೃಷ್ಟಿಸುವ ಪಟಾಕಿಯನ್ನು ಬಿಟ್ಟು ಹಸಿರು ದೀಪಾವಳಿ ಆಚರಣೆ ಬಗ್ಗೆ ಜನಜಾಗೃತಿ ಮೂಡಿಸಬೇಕಿದೆ ಎಂದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್ ಮಾತನಾಡಿ, ಮಾಲಿನ್ಯಕಾರಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ಶಬ್ದ ಹಾಗೂ ವಾಯು ಮಾಲಿನ್ಯದ ಜತೆಗೆ ಪಕ್ಷಿ-ಪ್ರಾಣಿ ಸಂಕುಲಗಳಿಗೆ ಧಕ್ಕೆಯುಂಟಾಗುತ್ತದೆ. ಇದನ್ನು ತಡೆಗಟ್ಟುವ ಸಲುವಾಗಿ ಪ್ರತಿಯೊಬ್ಬರೂ ದೀಪಾವಳಿ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಹಸಿರು ದೀಪಾವಳಿ ಆಚರಿಸಬೇಕು
ಎಂದರು. ಪುರಸಭೆಯ ಮುಖ್ಯಾಧಿಕಾರಿ ಟಿ.ಜೆ.ಗಿರೀಶ್ ಮಾತನಾಡಿ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿ ತ್ಯಜಿಸಿ ಮಾಲಿನ್ಯ ತಡೆಗಟ್ಟುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ,’’ ಎಂದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ನಾಗೇಶ್, ಭಾರತ್ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ, ಕಾರ್ಯದರ್ಶಿ ಎಂ.ಎಸ್.ಗಣೇಶ್, ಶಾಲಾ ಮುಖ್ಯ ಶಿಕ್ಷಕ ಕೆ.ಎ.ಜಾನ್ ಸನ್, ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಉದಯ್ ಕುಮಾರ್, ಶಾಲಾ
ಗೈಡ್ಸ್ ಶಿಕ್ಷಕಿ ಸಿಫಾನತ್, ಸ್ಕೌಟ್ಸ್ ಶಿಕ್ಷಕ ಜಾನ್ ಸನ್, ಶಿಕ್ಷಕಿಯವರಾದ ಪ್ರಿಯಾ, ಸುನೀತಾ, ಅರ್ಪಣಾ, ಪುರಸಭೆಯ ಸಿಬ್ಬಂದಿಗಳಾದ
ಆಲಿಯಾ ಬಾನು, ಕೀರ್ತಿ ಕುಮಾರಿ, ಸ್ವಚ್ಚತಾ ಮೇಸ್ತ್ರಿಮೋಹನ್ ಕುಮಾರ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಂದ
ಜಾಗೃತಿ ಅಭಿಯಾನ: ನಂತರ ವಿದ್ಯಾರ್ಥಿಗಳು ಹಸಿರು ದೀಪಾವಳಿ ಆಚರಿಸಿ-ಮಾಲಿನ್ಯ ತಡೆಯಿರಿ,,ಪಟಾಕಿ ತ್ಯಜಿಸಿ*ಮಾಲಿನ್ಯ ತಡೆಯಿರಿ*, ಹಣತೆ ಬೆಳಗಿಸಿ ದೀಪಾವಳಿ ಆಚರಿಸಿ,ಸ್ವಚ್ಛ ದೀಪಾವಳಿ-ಸ್ವಸ್ಥ ದೀಪಾವಳಿ*,ಪಟಾಕಿ ತ್ಯಜಿಸಿ* ಪರಿಸರ ಸಂರಕ್ಷಿಸಿ, ಪ್ಲಾಸ್ಟಿಕ್ ತ್ಯಜಿಸಿ-*ಮಾಲಿನ್ಯ ತಡೆಯಿರಿ ,*ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸೋಣ ಬನ್ನಿ*ಎಂಬಿತ್ಯಾದಿ ಘೋಷಣೆಗಳುಳ್ಳ ಭಿತ್ತಿ ಫಲಕಗಳನ್ನು ಜನಜಾಗೃತಿ ಮೂಡಿಸಿದರು.










