ಮಡಿಕೇರಿ ಅ.21 NEWS DESK : ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಿ.ಪಿ.ದಿನೇಶ್ ಕುಮಾರ್ ಸೇರಿದಂತೆ ಹಲವರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ, ಗೌರವ ನಮನ ಸಲ್ಲಿಸಿದರು. ಪೊಲೀಸ್ ಕವಾಯತು ಸಿಬ್ಬಂದಿಗಳು ಮೂರು ಸುತ್ತು ವಾಲಿ ಫೈರಿಂಗ್ ನಡೆಸಿದರು. ಈ ಸಂದರ್ಭದಲ್ಲಿ ಗಣ್ಯರು ಸೇರಿದಂತೆ ಎಲ್ಲರೂ ಎದ್ದು ನಿಂತು ಗೌರವ ವಂದನೆ ಸಲ್ಲಿಸಿದರು. ಹುತಾತ್ಮರ ಸ್ಮರಣಾರ್ಥ ಎಲ್ಲರೂ ಎದ್ದು ನಿಂತು ಎರಡು ನಿಮಿಷ ಮೌನಾಚರಣೆ ಮಾಡಿದರು.











