ಮಡಿಕೇರಿ NEWS DESK ಅ.2 : ಕೇಂದ್ರ ಸರಕಾರದ ಮೂಲಕ 2026 ಅಕ್ಟೋಬರ್ ನಿಂದ ನಡೆಯಲಿರುವ ಭಾರತ ದೇಶದ 16ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಎಲ್ಲಾ ಮೂರು ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.5ರಂದು ಬಿಟ್ಟಂಗಾಲದಲ್ಲಿ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸುವುದಾಗಿ ಹೇಳಿದ್ದಾರೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಬಿಟ್ಟಂಗಾಲದಲ್ಲಿ ಶಾಂತಿಯುತವಾಗಿ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್ ಸೇರಿದಂತೆ ಕೊಡವರ ಎಲ್ಲಾ ಸಂವಿಧಾನಿಕ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. 16ನೇ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಅಳವಡಿಸಬೇಕು, ಇದರ ಆಧಾರದಡಿ ಮುಂದೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕ್ಷೇತ್ರ ಪುನರ್ ವಿಂಗಡಣೆಗೆ ಮಾನದಂಡವಾಗಲಿದೆ. ಈ ಜನಗಣತಿಯು ಕೊಡವರ ರಾಜಕೀಯ ಸಬಲೀಕರಣ, ಸ್ವಯಂ ನಿರ್ಧಾರದ ಹಕ್ಕು ಸ್ಥಾಪಿಸಲು ಮೆಟ್ಟಿಲಾಗಲಿದೆ. ಅಲ್ಲದೆ ಕೊಡವರ ಧಾರ್ಮಿಕ ಸಂಸ್ಕಾರ ತೋಕ್ ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರಿಯಲು ಪೂರಕವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
2026-27ರ 16ನೇ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ, ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್ಟಿ ಪಟ್ಟಿಯಲ್ಲಿ ವರ್ಗೀಕರಿಸಬೇಕು. ಕೊಡವರ ಧಾರ್ಮಿಕ ಸಂಸ್ಕಾರ ತೋಕ್ ಗನ್ ಹಕ್ಕು ಚಿರಸ್ಥಾಯಿಯಾಗಿ ಉಳಿಸಬೇಕು, ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲಾಗುವುದು. ಅಲ್ಲದೆ ಜಾತಿ ಜನಗಣತಿಯ ಮೂರೂ ಕಾಲಂಗಳಲ್ಲಿ ಕೊಡವರು ‘ಕೊಡವ’ ಎಂದು ನಮೂದಿಸುವಂತೆ ಜನಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ. ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲಿದ್ದು, ಬಿಟ್ಟಂಗಾಲ ವ್ಯಾಪ್ತಿಯ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.










