ಮಡಿಕೇರಿ ನ.5 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮವನ್ನು ತ್ವರಿತವಾಗಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಇಂಧನ, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪ್ರವಾಸೋದ್ಯಮ, ಬೃಹತ್ ಮತ್ತು ಸಣ್ಣ ನೀರಾವರಿ, ಶಾಲಾ ಶಿಕ್ಷಣ, ಕಾರ್ಮಿಕ, ಲೋಕೋಪಯೋಗಿ, ಕೈಮಗ್ಗ ಮತ್ತು ಜವಳಿ, ಅರಣ್ಯ, ನಗರಾಭಿವೃದ್ಧಿ, ಯುವ ಸಬಲೀಕರಣ ಮತ್ತು ಕ್ರೀಡೆ, ಆಯುಷ್, ಕೌಶಲ್ಯಾಭಿವೃದ್ಧಿ, ಪಂಚಾಯತ್ ರಾಜ್, ಕೈಗಾರಿಕೆ, ನಗರಾಭಿವೃದ್ಧಿ, ಪದವಿ ಪೂರ್ವ ಶಿಕ್ಷಣ, ಹೀಗೆ ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕಾಗಿ ಇಂತಿಷ್ಟು ಹಣ ಮೀಸಲಿರಿಸಿದ್ದು, ಆದಷ್ಟು ಶೀಘ್ರ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದರು. ವಿವಿಧ ಇಲಾಖೆಗಳಲ್ಲಿ ವೈಯಕ್ತಿಕ ಮತ್ತು ಸಮುದಾಯ ಕಾರ್ಯಕ್ರಮಗಳನ್ನು ತಲುಪಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು ಎಂದು ವೆಂಕಟ್ ರಾಜಾ ಅವರು ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹೊನ್ನೇಗೌಡ ಅವರು ವಿವಿಧ ಇಲಾಖೆಗಳ ಪ್ರಗತಿ ಸಂಬಂಧ ಮಾಹಿತಿ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಸಚಿನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ಶೀರಾಜ್ ಅಹಮ್ಮದ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಪಂಚಾಯತ್ ರಾಜ್ ಕಾರ್ಯಪಾಲಕ ಎಂಜಿನಿಯರ್ ಜಿ.ಕೆ.ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಬೆಳ್ಯಪ್ಪ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಸಂಬಂಧ ಮಾಹಿತಿ ನೀಡಿದರು. ಕೃಷಿ ಇಲಾಖೆ ಶೇ.78 ರಷ್ಟು, ತೋಟಗಾರಿಕೆ ಶೇ.81 ರಷ್ಟು, ಮೀನುಗಾರಿಕೆ ಇಲಾಖೆ ಶೇ.99, ಸಹಕಾರ ಶೇ.100, ಸಮಾಜ ಕಲ್ಯಾಣ ಶೇ.70, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಶೇ.40, ವೈದ್ಯಕೀಯ ಶಿಕ್ಷಣ 91, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಶೇ.75 ರಷ್ಟು, ಕೌಶಲ್ಯಾಭಿವೃದ್ಧಿ ಶೇ.67 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಆಹಾರ ಮತ್ತು ಪೌಷ್ಟಿಕ ಭದ್ರತೆ, ಸೂಕ್ಷ್ಮ ನೀರಾವರಿ ಯೋಜನೆ, ಕೃಷಿ ಯಾಂತ್ರೀಕರಣ ಉಪ ಅಭಿಯಾನ, ಜೇನು ಸಾಕಾಣಿಕೆ, ಮೀನುಗಾರಿಕೆ ಅಭಿವೃದ್ಧಿಗೆ ಸಹಾಯಧನ, ವಿದ್ಯಾರ್ಥಿ ನಿಲಯಗಳ ನಿರ್ವಹಣೆ, ಕಾನೂನು ಪದವೀಧರರಿಗೆ ಪ್ರೋತ್ಸಾಹಧನ, ಕೌಶಲ್ಯಾಭಿವೃದ್ಧಿ ತರಬೇತಿ, ವಿದ್ಯಾರ್ಥಿಗಳ ಶುಲ್ಕ ಮರುಪಾವತಿ, ಯುವಕ ಸಂಘಗಳಿಗೆ ಕ್ರೀಡಾ ಕಿಟ್‍ಗಳ ವಿತರಣೆ, ಕ್ರೀಡಾ ತರಬೇತಿ, ಹೀಗೆ ವಿವಿಧ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. :: ನ.13 ರಂದು ಗೋಣಿಕೊಪ್ಪದಲ್ಲಿ ನಡಿಗೆ :: ಮೈಭಾರತ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿ ಮಾಜಿ ಉಪ ಪ್ರಧಾನಿ ಸರದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ‘ಜಿಲ್ಲಾ ಮಟ್ಟದ ಸರದಾರ್ 150’ ನಡಿಗೆ ಕಾರ್ಯಕ್ರಮವು ನವೆಂಬರ್, 13 ರಂದು ಬೆಳಗ್ಗೆ 9.30 ಗಂಟೆಗೆ ಗೋಣಿಕೊಪ್ಪದ ಕಾಫಿ ಬೋರ್ಡ್ ಬಳಿಯಿಂದ ಕಾವೇರಿ ಕಾಲೇಜಿನವರೆಗೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು. ಶಾಲಾ ಶಿಕ್ಷಣ, ಕಾಲೇಜು ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಗ್ರಾಮ ಪಂಚಾಯಿತಿ, ಹಾಗೂ ಸ್ಥಳೀಯ ಆಡಳಿತ ಅಧಿಕಾರಿಗಳು ಮತ್ತಿತರರು ಅಗತ್ಯ ಸಹಕಾರಕ್ಕೆ ಇದೇ ಸಂದರ್ಭದಲ್ಲಿ ಕೋರಿದರು.











