
ಮಡಿಕೇರಿ ನ.8 NEWS DESK : ಮರಗೋಡು ಎಸ್ ಕೆ ಎಫ್ ಸಿ ವತಿಯಿಂದ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಪ್ರಥಮ ವರ್ಷದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಇತ್ತೀಚಿನ ದಿನಗಳಲ್ಲಿ ಕ್ರೀಡೆಯಲ್ಲಿ ಪ್ರತಿಯೊಬ್ಬರಿಗೂ ಅವಕಾಶ ಸಿಗುವ ಉದ್ದೇಶದಿಂದ ಪ್ರತಿಯೊಂದು ಸಮುದಾಯದವರು ವಿಶೇಷವಾಗಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುತ್ತಿರುವುದು ಉತ್ತಮವಾದ ಬೆಳವಣಿಗೆ. ಇದರಿಂದಾಗಿ ಸಮುದಾಯದ ಯುವಕ-ಯುವತಿಯರಿಗೆ ತಮ್ಮ ಸಾಮರ್ಥ್ಯವನ್ನು ಸುಲಭವಾಗಿ ಪ್ರದರ್ಶಿಸುವ ಅವಕಾಶ ಒದಗಿದಂತಾಗುತ್ತದೆ. ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಪ್ರತಿಯೊಬ್ಬರೂ ತಮ್ಮ ಪ್ರತಿಭೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಏರಿಸುವುದರೊಂದಿಗೆ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ವಿಶ್ಲೇಷಿಸಿದರು. ಆಯೋಜಕರ ಈ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಮುಂದಿನ ದಿನಗಳಲ್ಲಿ ಇಂತಹ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆಗೊಳಿಸಿ ಸಮುದಾಯದ ಏಳಿಗೆಗೆ ಶ್ರಮಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಎಸ್ ಕೆ ಎಫ್ ಸಿ ಮರಗೋಡು ಅಧ್ಯಕ್ಷ ವಿಜಯ್, ಕೊಡಗು ಮೊಗೇರ ಸೇವಾ ಸಮಾಜ ಅಧ್ಯಕ್ಷ ಜನಾರ್ದನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.









