

ಮಡಿಕೇರಿ ನ.11 NEWS DESK : ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ನ.13 ರಂದು ಪೊನ್ನಂಪೇಟೆಯಿಂದ ಗೋಣಿಕೊಪ್ಪದವರೆಗೆ ನಡೆಯುವ ‘ಏಕತಾ ಯಾತ್ರೆ’ ಯಲ್ಲಿ ಬಿಜೆಪಿ ಭಾಗಿಯಾಗಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 9.30 ಗಂಟೆಗೆ ಪೊನ್ನಂಪೇಟೆಯಿಂದ ಏಕತಾ ಪಾದಯಾತ್ರೆ ಆರಂಭಗೊಂಡು ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನವರೆಗೆ ಸಾಗಲಿದೆ. ‘ಏಕತಾ ಯಾತ್ರೆ’ ಮೂಲಕ ರಾಷ್ಟ್ರದ ಏಕತೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಬಿಜೆಪಿ ಸ್ಮರಿಸುತ್ತದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತದೆ ಎಂದು ಹೇಳಿದ್ದಾರೆ. ಮೈಸೂರು, ಕೊಡಗು ಸಂಸದರಾದ ಯದುವೀರ್ ಒಡೆಯರ್ ಅವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರುಗಳು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಎಲ್ಲಾ ಘಟಕಗಳ ಪ್ರಮುಖರು ಏಕತಾ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದ್ದಾರೆ.











