ಮಡಿಕೇರಿ ನ.14 NEWS DESK : ಬಿಹಾರದ ಪ್ರಜ್ಞಾವಂತ ಮತದಾರರು ಎನ್‍ಡಿಎ ಮೈತ್ರಿ ಕೂಟಕ್ಕೆ ಭರ್ಜರಿ ಗೆಲುವು ತಂದುಕೊಡುವ ಮೂಲಕ ವೋಟ್ ಚೋರಿ ಕಟ್ಟುಕಥೆ ಕಟ್ಟಿದ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಹರ್ಷ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವೋಟ್ ಚೋರಿ ಆರೋಪ ಮಾಡುವ ಮೂಲಕ ದೇಶದ ಮತದಾರÀರನ್ನು ಅಪಮಾನಿಸಿದ ಕಾಂಗ್ರೆಸ್ ಗೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆ ಪಕ್ಷದ ಮುಖಂಡರು ಇನ್ನಾದರೂ ಮತದಾನದ ಕುರಿತು ಅಪಪ್ರಚಾರ ಮಾಡುವುದನ್ನು ನಿಲ್ಲಿಸಲಿ ಎಂದು ಒತ್ತಾಯಿಸಿದ್ದಾರೆ. ಭವ್ಯ ಭಾರತದ ಗುರಿಯೊಂದಿಗೆ ಚುನಾವಣೆಯನ್ನು ಎದುರಿಸಿದ ಎನ್‍ಡಿಎ ಮೈತ್ರಿ ಕೂಟದ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳಿಂದ ಮತದಾರರು ಗೆಲ್ಲಿಸಿದ್ದಾರೆ. ಈ ಅಭೂತಪೂರ್ವ ಗೆಲುವಿಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನಾಯಕತ್ವದ ಮೇಲೆ ವಿಶ್ವಾಸವಿಟ್ಟು ಮತದಾನ ಮಾಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮುಂಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಕಾರ್ಯಕರ್ತರ ಬಲದಿಂದ ಬಿಜೆಪಿ ಭರ್ಜರಿ ಜಯ ಸಾಧಿಸಲಿದೆ ಎಂದು ಮಹೇಶ್ ಜೈನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.











