ಸೋಮವಾರಪೇಟೆ ನ.27 NEWS DESK : ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದಿಂದ ಕೊಡಗು ಜಿಲ್ಲೆಯ ಒಕ್ಕಲಿಗ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಡಿ.6 ರಂದು ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಹೆಚ್.ಎನ್.ರವೀಂದ್ರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರಪೇಟೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ಡಿ.6 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಸಂಘದ ನಿರ್ದೇಶಕರುಗಳು ಭಾಗಿಯಾಗಲಿದ್ದಾರೆ. ಪೋಷಕರು ತಮ್ಮ ಮಕ್ಕಳೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಮಕ್ಕಳನ್ನು ಕರೆತಂದರೆ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ. ಇದರೊಂದಿಗೆ ಸಮುದಾಯದ ಇತರರಿಗೂ ಪ್ರೇರಣೆಯಾಗುತ್ತದೆ ಎಂದರು. ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ನಗದು ಬಹುಮಾನದೊಂದಿಗೆ ಪುರಸ್ಕರಿಸಲಾಗುವುದು ಎಂದರು. ಈ ಹಿಂದೆಯೇ ಸೋಮವಾರಪೇಟೆಯಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿನಿಯರ ವಸತಿ ನಿಲಯ ಸ್ಥಾಪನೆಗೆ ಕ್ರಮ ವಹಿಸಲಾಗಿತ್ತು. ಕಾಣದ ಕೈಗಳ ರಾಜಕೀಯ ಕುತಂತ್ರದಿಂದಾಗಿ ಅಲ್ಪ ಹಿನ್ನಡೆಯಾಗಿತ್ತು. ಇದೀಗ ಒತ್ತಡ ಹಾಕಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಮುಂದಿನ 8 ತಿಂಗಳ ಒಳಗೆ ಹಾಸ್ಟೆಲ್ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು. ಮಡಿಕೇರಿ ಹಾಗೂ ಕುಶಾಲನಗರದಲ್ಲಿಯೂ ವಸತಿ ನಿಲಯ ಸ್ಥಾಪನೆಗೆ ಚಿಂತಿಸಲಾಗಿದೆ. ಕೊಡಗಿನಲ್ಲಿ ನರ್ಸಿಂಗ್ ಕಾಲೇಜು ಸ್ಥಾಪನೆ ಸಂಬಂಧ ಈಗಾಗಲೇ ಆದಿಚುಂಚನಗಿರಿ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಒಕ್ಕಲಿಗರ ಸಂಘದ ಮೂಲಕ ಕಾಲೇಜು ಸ್ಥಾಪನೆಗೆ ಕ್ರಮವಹಿಸುವ ಸಂಬಂಧ ಪ್ರಕ್ರಿಯೆಗಳು ನಡೆಯುತ್ತಿವೆ. ನರ್ಸಿಂಗ್ ಕಾಲೇಜು ಸ್ಥಾಪನೆಯಿಂದ ಜಿಲ್ಲೆಯ ಸಾವಿರಾರು ಮಂದಿಗೆ ಅನುಕೂಲವಾಗಲಿದೆ ಎಂದು ರವೀಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಸದಸ್ಯರಾ ಹಾಲಪ್ಪ, ಪೃಥ್ವಿ ಗೌಡಳ್ಳಿ, ಗಿರಿಧರ್ ಉಪಸ್ಥಿತರಿದ್ದರು.











