ಮಡಿಕೇರಿ ಡಿ.4 NEWS DESK : ಮಡಿಕೇರಿ ಡಿ.4 : ಪ್ರವಾಸಿ ವಾಹನಗಳು ಸೇರಿದಂತೆ ಎಲ್ಲಾ ರೀತಿಯ ವಾಹನಗಳನ್ನು ತಪಾಸಣೆ ನಡೆಸಿ, ಒಟ್ಟು 1,140 ವಾಹನಗಳಿಂದ, ಪಾರ್ಟ್ ಬಿ ತೆರಿಗೆ ರೂ.1,57,21,024, ಪಾರ್ಟ್ ಎ ತೆರಿಗೆ ರೂ. 29,357 ಮತ್ತು ದಂಡ ಮೊತ್ತ ರೂ.2,27,800 ಸಂಗ್ರಹಿಸಲಾಗಿದೆ. ಒಟ್ಟು ರೂ.1,59,78,181 ರಾಜಸ್ವವನ್ನು ನವೆಂಬರ್ ತಿಂಗಳಿನಲ್ಲಿ ಸಂಗ್ರಹಿಸಲಾಗಿದ್ದು, ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದು ಕೊಡಗು ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಟಿ.ಸತೀಶ್ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ನಿರಂತರ ವಾಹನಗಳ ತಪಾಸಣಾ ಕಾರ್ಯ ನಡೆಸಲಾಗುತ್ತಿದೆ. ನ.1 ರಿಂದ 30 ರವರೆಗೆ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಸಹಯೋಗದೊಂದಿಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಿತು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಇನ್ನಿತರ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪ್ರಬಂಧ ಮತ್ತು ಚರ್ಚಾಸ್ಪರ್ಧೆಯನ್ನು ನಡೆಸಲಾಗಿತ್ತು. ಅಲ್ಲದೆ ಸರ್ಕಾರಿ ಜೂನಿಯರ್ ಕಾಲೇಜು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲರಾದ ವಿಜಯ್ ಮತ್ತು ರಾಘವ್ ಇವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ವಾಯು ಮಾಲಿನ್ಯದ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕೆ.ಎಸ್.ಆರ್.ಟಿ.ಸಿ ಚಾಲಕ ಸಿಬ್ಬಂದಿಗಳಿಗೆ, ನಗರದ ಪ್ರಮುಖ ಪಟ್ಟಣದಲ್ಲಿ ಸಾರ್ವಜನಿಕರಿಗೆ ವಾಹನಗಳಿಂದ ಉಂಟಾಗುವ ವಾಯು ಮಾಲಿನ್ಯವನ್ನು ತಡೆಗಟ್ಟಲು ತೆಗೆದುಕೊಳ್ಳಬಹುದಾದ ಕ್ರಮದ ಬಗ್ಗೆ ತಿಳಿಸಲಾಯಿತು. ಈ ಸಂಬಂಧ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಮುಕ್ತಾಯ ಸಮಾರೋಪ ಸಮಾರಂಭ ನಡೆಯಿತು ಎಂದು ಎಸ್.ಟಿ.ಸತೀಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.










