ಕುಶಾಲನಗರ, ಡಿ.9 NEWS DESK : ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವತಿಯಿಂದ ಕುಶಾಲನಗರ ಪಟ್ಟಣದ ಫಾತಿಮ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ತಾಲ್ಲೂಕುಮಟ್ಟದ
ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ , ಶಿಕ್ಷಕರು ನಿರಂತರ ವಿದ್ಯಾರ್ಥಿ ಇದ್ದಂತೆ, ತಮ್ಮ ಬೋಧನಾ ಸಾಮರ್ಥ್ಯವನ್ನು ಉತ್ತಮಪಡಿಸಿಕೊಳ್ಳಲು ನಿರಂತರ ಅಧ್ಯಯನದಲ್ಲಿ ತೊಡಗಬೇಕು. ಕಲಿಕೆಯೇ ಬಂಡವಾಳ. ಇದರಲ್ಲಿ ನಿರಂತರತೆಯನ್ನು ಕಾಯ್ದುಕೊಳ್ಳುವುದರಿಂದ ಹೆಚ್ಚು ಕ್ರಿಯಾಶೀಲತೆ ಬೆಳೆಯುತ್ತದೆ. ಇದಕ್ಕೆ ಸಹ-ಪಠ್ಯ ಚಟುವಟಿಕೆ ಸ್ಪರ್ಧೆಗಳೂ ಸಹಾಯಕವಾಗಿದ್ದು, ಇವುಗಳಲ್ಲಿ ಶಿಕ್ಷಕರು ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಜ್ಞಾನವೂ ವೃದ್ಧಿಸಲಿದ್ದು, ಪಾಠ ಭೋದನೆಗೂ ಸಹಕಾರಿಯಾಗುತ್ತದೆ ಎಂದರು. ಸಹಪಠ್ಯ ಚಟುವಟಿಕೆಗಳು ಶಾಲಾ ಶಿಕ್ಷಣದ ಪ್ರಮುಖ ಭಾಗವಾಗಿದ್ದು, ಅವು ಶೈಕ್ಷಣಿಕ ಪಠ್ಯಕ್ರಮಕ್ಕೆ ಪೂರಕವಾಗಿವೆ. ವಿದ್ಯಾರ್ಥಿಗಳ
ಪ್ರತಿಭೆ ಮತ್ತು ಕೌಶಲ್ಯಗಳನ್ನು ಉದ್ದೀಪನಗೊಳಿಸುವ ದಿಸೆಯಲ್ಲಿ ಶಿಕ್ಷಕರಿಗೂ ಇಂತಹ ವೇದಿಕೆಯನ್ನು ಒದಗಿಸುವ ಮೂಲಕ ಅವರ ಪ್ರತಿಭೆಯನ್ನು ಅನಾವರಣಗೊಳಿಸಲು/ಪ್ರದರ್ಶಿಸಲು ಸಹಾಯಕವಾಗುತ್ತದೆ ಎಂದು ಬಿಇಓ ಕೃಷ್ಣಪ್ಪ ಹೇಳಿದರು. ಶಿಕ್ಷಕರು ತಮ್ಮ ಬೋಧನಾ ಕಾರ್ಯದೊಂದಿಗೆ ತಮ್ಮನ್ನು ಇಂತಹ ಸಹ ಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗಿ ಮನಸ್ಸಿಗೆ ಸಂತೃಪ್ತಿ ಸಿಗಲಿದೆ ಎಂದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್, ಇಂತಹ ಚಟುವಟಿಕೆಗಳಿಂದ ಶಿಕ್ಷಕರು ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಲು ಸಾಧ್ಯವಾಗುತ್ತವೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅವು ಸಹಾಯ ಮಾಡುತ್ತವೆ ಎಂದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಚ್.ಎನ್.ಮಂಜುನಾಥ್, ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಕೆ.ಬಸವರಾಜ್, ಉಪಾಧ್ಯಕ್ಷೆ ಎಸ್.ಕೆ.ಸೌಭಾಗ್ಯ, ಕಾರ್ಯದರ್ಶಿ ಕವಿತ, ನಿರ್ದೇಶಕಿ ಎಚ್.ಎಸ್.ಉಮಾದೇವಿ, ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್.ರತ್ನಕುಮಾರ್, ಕಾರ್ಯದರ್ಶಿ ಟಿ.ವಿ.ಶೈಲಾ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಟಿ.ಎಸ್.ಶಶಿಕುಮಾರ್,
ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್.ಸುಕುಮಾರಿ, ಶಾಲಾ ಮುಖ್ಯ ಶಿಕ್ಷಕ ಕೆ.ಎ.ಜಾನ್ ಸನ್, ಶಿಕ್ಷಣ ಸಂಯೋಜಕಿ ಯದುಕುಮಾರಿ, ಸಿ.ಆರ್.ಪಿ., ಟಿ.ಈ.ವಿಶ್ವನಾಥ್, ನಿವೃತ್ತ ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ಸೇರಿದಂತೆ ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು ಇದ್ದರು. ಶಿಕ್ಷಕರ ಪ್ರತಿಭೆ ಅನಾವರಣ:: ಶಿಕ್ಷಕರಿಗೆ ಏರ್ಪಡಿಸಿದ್ದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಲ್ಲಿ ಶಿಕ್ಷಕರು ಭಕ್ತಿಗೀತೆ, ಆಶುಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಪಾಠೋಪಕರಣಗಳ ತಯಾರಿಕೆ, ಚಿತ್ರಸ್ಪರ್ಧೆ ಹಾಗೂ ರಸಪ್ರಶ್ನೆ (ಸಾಮಾನ್ಯ ಜ್ಞಾನ ಮತ್ತು ವಿಜ್ಞಾನ ವಿಷಯಗಳಲ್ಲಿ) ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.












