ಮೂರ್ನಾಡು ಡಿ.25 NEWS DESK : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ನ್ಯಾಯಯುತವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೇ ಆ ಗುರಿಯನ್ನು ತಲುಪಲು ಅದಮ್ಯ ಪ್ರಯತ್ನ ಇದ್ದಾಗ ಮಾತ್ರ ಸಾಧನೆಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ಚರ್ಯ ಹೇಳಿದರು. ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿದ್ಯಾಸಂಸ್ಥೆಯ 26ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರಹೊಮ್ಮಿಸುವ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಪ್ರಮುಖವಾದದ್ದು, ಈಗಿನ ಮಕ್ಕಳು ಸಣ್ಣ ಸಣ್ಣ ವಿಚಾರಗಳಿಗೆ ಬದುಕನ್ನು ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಇವರಲ್ಲಿ ಧೈರ್ಯವನ್ನು ತುಂಬುವ ಕಾರ್ಯವಾಗಬೇಕು ಎಂದು ತಿಳಿಸಿದರು. ಇಂತಹ ಶಾಲೆಗಳಿಂದಲೆ ದೇಶವನ್ನು ಮುನ್ನೆಡುಸುವಂತಹ ಪ್ರತಿಭಾವಂತ ವ್ಯಕ್ತಿಗಳು ರೂಪುಗೊಳ್ಳುತ್ತಾರೆ ಎಂದು ಹೇಳಿದರು. ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಜೀವನದ ಮೌಲ್ಯಗಳು, ಸಂಸ್ಕಾರಗಳನ್ನು ರೂಢಿಸಿಕೊಳ್ಳಬೇಕು. ಈಗಿನ ಮಕ್ಕಳು ಆರೋಗ್ಯಕರವಲ್ಲದ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವುದು ವಿಷಾದನೀಯ. ಈ ಬಗ್ಗೆ ಪೋಷಕರು ಗಮನ ಹರಿಸಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಡುವಂಡ ಬೆಲ್ಲುಚಿಣ್ಣಪ್ಪ, ಕಾರ್ಯದರ್ಶಿ ಬಡುವಂಡ ಬೋಪಣ್ಣ, ಖಜಾಂಚಿ ಎನ್.ಒ.ಮ್ಯಾಥ್ಯು, ನಿರ್ದೇಶಕರಾದ ಮಾಳೇಟಿರ ನವೀನ್ ಕಾರ್ಯಪ್ಪ, ಡಾ. ಜೆ.ಎ.ಕುಂಞಅಬ್ದುಲ್ಲಾ, ಬಡುವಂಡ ವಿಜಯ, ಅವರೆಮಾದಂಡ ಸುಗುಣ ಸುಬ್ಬಯ್ಯ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಶೀಲಾ ಅಬ್ದುಲ್ಲಾ, ಶಾಲಾ ಮುಖ್ಯೋಪಾಧ್ಯಾಯಿನಿ ಶಿಲ್ಪ ಪೊನ್ನಮ್ಮ, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷತಾಯಿಬ್ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ವಿಜ್ಞಾನ ಮತ್ತು ಕರಕುಶಲ ವಸ್ತು ಪ್ರದರ್ಶನ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಉದ್ಘಾಟಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪಾರಿತೋಷಕ ಮತ್ತು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಬಹುಮಾನಗಳನ್ನು ಅತಿಥಿಗಳು ವಿತರಿಸಿದರು. ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಮಡಿಕೇರಿ ತಾಲೂಕಿಗೆ ಪ್ರಥಮ ಸ್ಥಾನಗಳಿಸಿದ ಮೊಹಮ್ಮದ್ ಸಾಹಿಲ್ ಹಾಗೂ ನಿವೃತ್ತ ಮುಖ್ಯ ಶಿಕ್ಷಕಿ ಶೀಲಾ ಅಬ್ದುಲ್ಲಾ, ಮಾಜಿ ಅಧ್ಯಕ್ಷ ಮಾಳೇಟಿರ ನವೀನ್ ಕಾರ್ಯಪ್ಪ, ಕುಂಞಮ್ಮ ಮತ್ತು ಶಾಲಾ ವಿದ್ಯಾರ್ಥಿ ಪ್ರಧಾನ್ ಬಸಪ್ಪ ಅವರನ್ನು ಹಳೆಯ ವಿದ್ಯಾರ್ಥಿಗಳ ಸಂಘದಿಂದ ಸನ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಕೆ.ಎಚ್.ಹನ ಪರ್ವಿನ್ ಸ್ವಾಗತಿಸಿದರು, ಪಿ.ಎಸ್. ಪರಿದೇಚಮ್ಮ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶಿಲ್ಪ ಪೊನ್ನಮ್ಮ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿನಿ ಯು.ಆರ್.ಭೂಮಿಕ ಭಟ್ ವಂದಿಸಿದರು. ಸಮಾರಂಭದ ನಂತರ ಜರುಗಿದ ಶಾಲಾ ವಿದ್ಯಾರ್ಥಿಗಳ ಸಾಂಸ್ಕøತಿಕ ಕಾರ್ಯಕ್ರಮಗಳು ಹೆಚ್ಚು ಆಕರ್ಷಣಿಯವಾಗಿದ್ದವು.
ವರದಿ : ಟಿ.ಸಿ. ನಾಗರಾಜ್, ಮೂರ್ನಾಡು.











