ನಾಪೋಕ್ಲು ಡಿ.25 NEWS DESK : ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಚಿತ್ರಕಲಾಸ್ಪರ್ಧೆಯಲ್ಲಿ ಏಳು ಶಿಕ್ಷಕರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಿಮ್ನಾಸ್ಟಿಕ್ ಸಭಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಿಂದ ತಲಾ ಏಳು ಶಿಕ್ಷಕರು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ಭಕ್ತಿ ಗೀತೆ ಗಾಯನ, ಆಶುಭಾಷಣ, ಪ್ರಬಂಧ ಸ್ಪರ್ಧೆ ಸ್ಥಳದಲ್ಲಿ ಆಟೋಪಕರಣ ತಯಾರಿ, ಸ್ಥಳದಲ್ಲಿ ಚಿತ್ರ ಬಿಡಿಸುವಿಕೆ, ಸಾಮಾನ್ಯ ಜ್ಞಾನ- ರಸಪ್ರಶ್ನೆ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಈ ಏಳು ವಿಭಾಗಗಳಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆ ನಡೆಯಿತು. ತಾಲ್ಲೂಕು ಮಟ್ಟದಲ್ಲಿ ಆಯ್ಕೆಯಾದ ಶಿಕ್ಷಕರು ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಪ್ರಾಥಮಿಕ ಶಾಲಾ ವಿಭಾಗದ ಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಗೋಣಿಕೊಪ್ಪಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ರಾಜಶ್ರೀ ಕೆ.ಎಸ್.ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಶುಭಾಷಣ ಸ್ಪರ್ಧೆಯಲ್ಲಿ ಹಾತೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಜಯ್ ಕೆ.ಎಸ್. ಪ್ರಬಂಧ ಸ್ಪರ್ಧೆ, ಎಮ್ಮೆಮಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರಮ್ಯ ಕೆ.ಜಿ. ಸ್ಥಳದಲ್ಲಿ ಪಾಠೋಪಕರಣ ತಯಾರಿ ಸ್ಪರ್ಧೆ, ಗುಡ್ಡೆಹೊಸೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಯಶುಮತಿ ಬಿ.ಡಿ. ಸ್ಥಳದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆ, ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯ ಉತ್ತಪ್ಪ ಎಂ.ಎಸ್. ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಮಾನ್ಯ ಜ್ಞಾನದ ರಸಪ್ರಶ್ನೆ ಸ್ಪರ್ಧೆಯಲ್ಲಿ ಗರಗಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿನು ಟಿ. ಹಾಗೂ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಸುಂಟಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸತೀಶ್ ಕೆ.ಎನ್. ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಪುಟ್ಟರಾಜು, ಆಶುಭಾಷಣ ಸ್ಪರ್ಧೆಯಲ್ಲಿ ಹಂಡ್ಲಿ ಸರ್ಕಾರಿ ಪ್ರೌಢಶಾಲೆಯ ವಿಕ್ರಾಂತ್ ಕೆ., ಪ್ರಬಂಧ ಸ್ಪರ್ಧೆಯಲ್ಲಿ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಭವಾನಿ ಶಂಕರ್ ಕೆ.ಜೆ ,ಸ್ಥಳದಲ್ಲಿ ಪಾಠೋಪಕರಣ ತಯಾರಿಸಿ ಸ್ಪರ್ಧೆಯಲ್ಲಿ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಸಹನ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸ್ಥಳದಲ್ಲಿ ಚಿತ್ರಬಿಡಿಸುವ ಸ್ಪರ್ಧೆಯಲ್ಲಿ ಪೆÇನ್ನಂಪೇಟೆ ಕೆಪಿಎಸ್ ಶಾಲೆಯ ಶಿಕ್ಷಕ ಬಸವರಾಜ ಬಡಿಗೇರ, ಸಾಮಾನ್ಯ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪೆರಂಪಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ನಟರಾಜ ಸಿ. ಹಾಗೂ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಚೆನ್ನಯ್ಯನ ಕೋಟೆ ಸರ್ಕಾರಿ ಪ್ರೌಢಶಾಲೆಯ ಹನೀಸಾ ಕೆ.ಎಂ.ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲ್ಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಶಿಕ್ಷಕರು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಉದ್ಘಾಟನಾ ಸಮಾರಂಭದಲ್ಲಿ ವಿಷಯ ಪರಿವೀಕ್ಷಕಿ ಬಿಂದು ಮಾತನಾಡಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧಿಸುವುದರೊಂದಿಗೆ ಸಹಪಠ್ಯ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಶಿಕ್ಷಕರು ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಉತ್ತಮ ಶಿಕ್ಷಕರಾಗಲು ಸಾಧ್ಯ ಎಂದರು. ಸಮೂಹ ಸಂಪನ್ಮೂಲ ವ್ಯಕ್ತಿ ಶರ್ಮಿಳಾ ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಶಿಕ್ಷಕರು ಸದ್ಯದಲ್ಲಿಯೇ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆದಿದ್ದಾರೆ. ಸ್ಪರ್ಧೆ ನಡೆಯುವ ಸ್ಥಳ ಮತ್ತು ದಿನಾಂಕವನ್ನು ಸಂಬಂಧಪಟ್ಟ ಶಿಕ್ಷಕರಿಗೆ ದೂರವಾಣಿ ಮೂಲಕ ತಿಳಿಸಲಾಗುವುದು ಎಂದು ವಿಷಯ ಪರಿವೀಕ್ಷಕಿ ಬಿಂದು ತಿಳಿಸಿದರು.
ವರದಿ: ದುಗ್ಗಳ ಸದಾನಂದ.











