ಮಡಿಕೇರಿ NEWS DESK ಡಿ.28 : ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಆಯೋಜನೆಗೊಂಡಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯ ಸಮಾರೋಪ ಸಮಾರಂಭ ಡಿ.30 ರಂದು ನಡೆಯಲಿದೆ. ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಎಸ್‌ಎಲ್‌ಎನ್ ಗ್ರೂಪ್‌ನ ಅಧ್ಯಕ್ಷ ಎನ್.ಸಾತಪ್ಪನ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥನ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಹಾಕಿ ಒಲಂಪಿಯನ್, ಅರ್ಜುನ ಪ್ರಶಸ್ತಿ ವಿಜೇತ ವಿ.ಆರ್.ರಘುನಾಥ್, ಹಾಕಿ ಕೂರ್ಗ್ ಕಾರ್ಯದರ್ಶಿ ಅಮ್ಮಂಡಿರ ಚೇತನ್ ಕಾವೇರಿಯಪ್ಪ ಉಪಸ್ಥಿತರಿರುವರು.









