
ಮಡಿಕೇರಿ ಡಿ.31 NEWS DESK : ಕೇರಳ ರಾಜ್ಯದ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಮತ್ತು ಗಣ್ಯರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾಗವಹಿಸಿದರು. ಈ ಸಂದರ್ಭ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಶ್ರೀ ಗುರುಗಳಿಗೆ ನಮಿಸಲಾಯಿತು. ಬಳಿಕ ಮಠದ ಯಾಯಾತ್ರಾರ್ಥಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕ ಸುಧಾರಣೆಗೆ ಮುನ್ನಡೆ ಬರೆದ ದರ್ಶನಿಕ ಶ್ರೀ ನಾರಾಯಣ ಗುರುಗಳ ಜೀವನ ಹಾಗೂ ಉಪದೇಶಗಳನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಕೇರಳ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.









