ಮಡಿಕೇರಿ ಡಿ.31 NEWS DESK : ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಕಾರದಲ್ಲಿ ಜ.1 ರಿಂದ 31 ರವರೆಗೆ ರಸ್ತೆ ಸುರಕ್ಷತಾ ಮಾಸಾಚರಣೆ ನಡೆಯಲಿದೆ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ ಹಾಗೂ ಸಾರಿಗೆ ಇಲಾಖೆಯ ಆಯುಕ್ತರಾದ ಯೋಗೇಶ್ ಅವರು ತಿಳಿಸಿದ್ದಾರೆ. ವಿಡಿಯೋ ಸಂವಾದ ಮೂಲಕ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾಹಿತಿ ನೀಡಿದ ಅವರು, ರಾಜ್ಯದ ಪ್ರತಿ ಹೋಬಳಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯಾದಾದ್ಯಂತ ರಸ್ತೆ ಸುರಕ್ಷತಾ ಮಾಸಾಚರಣೆ ನಡೆಯಲಿದ್ದು, ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಅಪಘಾತ ತಡೆಯುವಲ್ಲಿ ಜಾಗೃತಿ ಮೂಡಿಸುವುದು ಅತೀ ಮುಖ್ಯವಾಗಿದೆ ಎಂದು ಹೇಳಿದರು. 2019 ರಿಂದ 2025 ರವರೆಗೆ 2.13 ಲಕ್ಷ ಅಪಘಾತಗಳು ಸಂಭವಿಸಿ 60 ಸಾವಿರ ಜನರು ಮೃತಪಟ್ಟಿದ್ದಾರೆ. ಬೆಂಗಳೂರು ಸಿಟಿಯಲ್ಲೇ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ಹೇಳಿದರು. ರಸ್ತೆ ಬದಿ ನಡೆದುಕೊಂಡು ಹೋಗುವವರ ಮೇಲೆ ಅಪಘಾತಗಳು ಶೇ.28 ರಷ್ಟು ಸಂಭವಿಸಿದೆ. ಆದ್ದರಿಂದ ರಸ್ತೆ ಸುರಕ್ಷತೆ ಬಗ್ಗೆ ಯುವಜನರಲ್ಲಿ ಅರಿವು ಮೂಡಿಸುವಲ್ಲಿ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು. ಜಿಲ್ಲಾಡಳಿತ, ಪೊಲೀಸ್, ಜಿಲ್ಲಾ ಪಂಚಾಯಿತಿ, ಸಾರಿಗೆ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹೀಗೆ ವಿವಿಧ ಇಲಾಖೆಗಳು, ಜೊತೆಗೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿ ರಸ್ತೆ ಸುರಕ್ಷತಾ ಮಾಸಾಚರಣೆಗೆ ಅರಿವು ಮೂಡಿಸಲು ಸಹಕರಿಸುವಂತೆ ಕೋರಿದರು. ರಸ್ತೆ ಸುರಕ್ಷತೆ ಸಂಬಂಧ ಯುವಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ. ವಾಹನ ಚಾಲನಾ ಪರವಾನಗಿ ಪಡೆಯದೆ ವಾಹನ ಓಡಿಸುತ್ತಿರುವುದು ಕಂಡುಬರುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ಒಂದು ವರ್ಷದಲ್ಲಿ 33 ಸಾವಿರ ಅಪಘಾತಗಳು ಸಂಭವಿಸಿದ್ದು, 12 ಸಾವಿರ ಜನರು ಮೃತಪಟ್ಟಿದ್ದಾರೆ. ಆದ್ದರಿಂದ ಅಪಘಾತವನ್ನು ತಡೆದು ಪ್ರತಿಯೊಬ್ಬರ ಜೀವ ರಕ್ಷಿಸುವುದು ಮುಖ್ಯ. ಆ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದರು. ‘ಕುಟುಂಬದ ಜವಾಬ್ದಾರಿ ಹೊಂದಿರುವ ಯುವ ಜನರು ಕೆಲಸ ಮಾಡುವ ಸಂದರ್ಭದಲ್ಲಿ ಅಪಘಾತವಾಗಿ ಮೂಲೆ ಸೇರುತ್ತಾರೆ, ಇದು ಆಗಬಾರದು. ಆ ನಿಟ್ಟಿನಲ್ಲಿ ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಪ್ರತಿಯೊಬ್ಬರಲ್ಲಿ ತಿಳುವಳಿಕೆ ಮುಖ್ಯ ಎಂದರು.’ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಂತಾಗಬೇಕು ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ಸಲಹೆ ಮಾಡಿದರು. ಸಾರಿಗೆ ಇಲಾಖೆಯ ಆಯುಕ್ತರಾದ ಯೋಗೇಶ್ ಅವರು ಮಾತನಾಡಿ ಪ್ರತೀ ವರ್ಷ ಜನವರಿ ತಿಂಗಳಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ ಹಮ್ಮಿಕೊಂಡು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಲಾಗುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿನ 67 ಪ್ರಾದೇಶಿಕ ಸಾರಿಗೆ ಕಚೇರಿ ವ್ಯಾಪ್ತಿಯಲ್ಲಿ ಹಾಗೂ ವಿವಿಧ ಕಡೆಗಳಲ್ಲಿ ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ, ಲೋಕೋಪಯೋಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಾಲಾ ಶಿಕ್ಷಣ, ಹೀಗೆ ವಿವಿಧ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಅಪಘಾತ ತಡೆಯುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಅಪಘಾತ ಸಂಭವಿಸಿ ಬದುಕಿರುವವರ ನೋವು ನೋಡುವುದು ಅಸಾಧ್ಯ. ಆದ್ದರಿಂದ ರಸ್ತೆ ಸುರಕ್ಷತೆ ಬಗ್ಗೆ ಅರಿವು ಇರಬೇಕು. ಮುಂದಿನ ಆರು ತಿಂಗಳಲ್ಲಿ 4,800 ಹೊಸ ಬಸ್ಸುಗಳು ಬರಲಿವೆ ಎಂದು ಆಯುಕ್ತರು ತಿಳಿಸಿದರು. ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಮಾತನಾಡಿ ಅಪಘಾತ ತಪ್ಪಿಸುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಎಲ್ಲರಲ್ಲಿ ಜಾಗೃತಿ ಅಗತ್ಯ ಎಂದರು. ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಅನುಸರಿಸಬೇಕು. ಹೆಲ್ಮೇಟ್ ಧರಿಸಬೇಕು. ಪರವಾನಗಿ ಪಡೆದು ವಾಹನ ಓಡಿಸಬೇಕು ಎಂದು ಸಲಹೆ ಮಾಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಕಾನೂನು ನೆರವು ಅಭಿರಕ್ಷರು ಇತರರು ಪಾಲ್ಗೊಂಡಿದ್ದರು.










