
ಮಡಿಕೇರಿ NEWS DESK ಜ.10 : ಸಾಮಾಜಿಕ ಜಾಲತಾಣದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅವಹೇಳನ ಮಾಡಿರುವ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನರಿಂದ ಆಯ್ಕೆಯಾದ ಗೌರವಾನ್ವಿತ ಶಾಸಕರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದಿಸಲಾಗಿದೆ. ‘ಶ್ರದ್ಧಾಂಜಲಿ’ ಪೋಸ್ಟ್ ಹಾಕುವ ಮೂಲಕ ಪರಿಶಿಷ್ಟ ಸಮುದಾಯದ ಮಹಿಳೆಯ ಆತ್ಮಗೌರವಕ್ಕೆ ದಕ್ಕೆ ತರಲಾಗಿದೆ. ಇದೊಂದು ಹೇಯ ಕೃತ್ಯವಾಗಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದ ಬಿಗಿ ತಪ್ಪಿದ ಆಡಳಿತವೇ ಕಾರಣವೆಂದು ಟೀಕಿಸಿದ್ದಾರೆ. ಪ್ರತಿ ಬಾರಿ ಸಾಮಾಜಿಕ ಬದ್ಧತೆ ಮತ್ತು ಅಹಿಂದ ಪರ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟರು ಹಾಗೂ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಪರಿಶಿಷ್ಟ ಸಮುದಾಯದ ಶಾಸಕಿಯೊಬ್ಬರಿಗೆ ಅವಮಾನವಾದಾಗ ಸರಕಾರ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕಾಗಿತ್ತು. ಆದರೆ ಭಾಗೀರಥಿ ಮುರುಳ್ಯ ಅವರನ್ನು ಅವಹೇಳನ ಮಾಡಿರುವ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದಂತೆ ಕಂಡು ಬರುತ್ತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ, ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ಸಮಾನತೆ ಮಾಯವಾಗಿದೆ ಎಂದು ಆರೋಪಿಸಿದ್ದಾರೆ. ಸುಳ್ಯ ಶಾಸಕಿಯನ್ನು ಅವಮಾನಿಸಿದ ಪ್ರಕರಣ ಅತ್ಯಂತ ಖಂಡನೀಯ. ಈ ಕುರಿತು ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳನ್ನು ಅವಹೇಳನ ಮಾಡುವ ಪ್ರಕರಣಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಾಮಾಜಿಕ ಜಾಲತಾಣದ ದುರುಪಯೋಗವನ್ನು ತಡೆಯಬೇಕು ಎಂದು ಎಂ.ಎಂ.ಪರಮೇಶ್ವರ ಒತ್ತಾಯಿಸಿದ್ದಾರೆ.









