
ಮಡಿಕೇರಿ NEWS DESK ಜ.11 : ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಮೀಸಲಿಡಬೇಕೆಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ಮೂಲಕ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿರುವ ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಕಳೆದ ಬಜೆಟ್ ನಲ್ಲಿ ಜಿಲ್ಲೆಗೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಅಲ್ಪ ಪ್ರಮಾಣದ ಅನುದಾನ ನೀಡಲಾಗಿದೆ. ಈ ಬಾರಿ ಹೆಚ್ಚಿನ ಅನುದಾನವನ್ನು ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕೆಂದು ಕೋರಿದ್ದಾರೆ.
ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಸುರಿದ ಅತಿ ಮಳೆಯಿಂದ ಕೃಷಿ ಫಸಲು ನಾಶವಾಗಿ ರೈತರಿಗೆ ನಷ್ಟವಾಗಿದೆ. ಆದರೆ ಇಲ್ಲಿಯವರೆಗೆ ಬೆಳೆಹಾನಿ ಪರಿಹಾರ ಘೋಷಣೆಯಾಗಿಲ್ಲ. ಇದನ್ನು ಈ ಬಾರಿಯ ಬಜೆಟ್ ನಲ್ಲಿ ಬಿಡುಗಡೆ ಮಾಡಬೇಕು. ಅತಿವೃಷ್ಟಿಯಿಂದ ರಸ್ತೆಗಳು ಹದಗೆಟ್ಟಿದ್ದು, ಸರ್ವಋತು ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಲ್ಯಾಬ್ ಟೆಕ್ನಿಷಿಯನ್, ಶಾಲೆಯಲ್ಲಿ ಶಿಕ್ಷಕರು, ಪಶು ಚಿಕಿತ್ಸಾಲಯದಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ಈ ಇಲಾಖೆಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಹಣ ಒದಗಿಸಬೇಕು ಮತ್ತು ಖಾಲಿ ಹುದ್ದೆ ಭರ್ತಿ ಮಾಡಬೇಕು.
ಪ್ರತಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಜಿಲ್ಲೆಯ ಹಲವು ಭಾಗಗಳನ್ನು ಕಾಡುತ್ತದೆ. ರೈತರ ಬೆಳೆಗಳಿಗೆ ನೀರು ಇಲ್ಲದೆ ಒಣಗುತ್ತದೆ, ಆದ ಕಾರಣ ಜಿಲ್ಲೆಯಲ್ಲಿ ಕಾವೇರಿ ನದಿ, ಕೊಲ್ಲಿಗಳಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲು ಅನುದಾನ ನೀಡಬೇಕು. ಮಾನವ- ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ, ಆನೆ ದಾಳಿಯಿಂದ ರೈತರ ಫಸಲು ನಾಶವಾಗುತ್ತಿದೆ. ಈ ಸಮಸ್ಯೆಯಿಂದ ಜಿಲ್ಲೆಯನ್ನು ಪಾರು ಮಾಡಲು ನುರಿತ ತಜ್ಞರ ಸಲಹೆ ಪಡೆದು ಯೋಜನೆ ರೂಪಿಸಬೇಕು.
ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಕಾಡಿನಂಚಿನಲ್ಲಿ ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿರುವ ಜನರ ಕಲ್ಯಾಣಕ್ಕಾಗಿ ಹೆಚ್ಚಿನ ಹಣ ಕಾಯ್ದಿರಿಸಬೇಕು. ಕೊಡಗಿನ ಪ್ರವಾಸೋದ್ಯಮದ ಉತ್ತೇಜನಕ್ಕೆ ಬಜೆಟ್ ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಸ್ಕ್ವಾಡ್ರನ್ ಲೀಡರ್ ಎ.ಬಿ.ದೇವಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅವರ ನೆನಪಿನಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲು ಯೋಜನೆ ರೂಪಿಸಬೇಕು. ಜಿಲ್ಲೆಯಲ್ಲಿ ತಂತ್ರಜ್ಞಾನ ಪಾರ್ಕ್ ಮತ್ತು ಹೊಸ ಉದ್ಯಮ ಸ್ಥಾಪನೆಗೆ ಬಜೆಟ್ ನಲ್ಲಿ ಕ್ರಮ ಕೈಗೊಳ್ಳಬೇಕು. ಕಾವೇರಿ, ಲಕ್ಷ್ಮಣತೀರ್ಥ ಮತ್ತಿತರ ನದಿಗಳು ಕಲುಷಿತಗೊಳ್ಳುವುದನ್ನು ತಡೆಯಬೇಕು ಮತ್ತು ನದಿಗಳನ್ನು ತ್ಯಾಜ್ಯಮುಕ್ತಗೊಳಿಸಬೇಕು. ವಿರಾಜಪೇಟೆ, ಸೋಮವಾರಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.








