
ಮಡಿಕೇರಿ ನ.23 NEWS DESK : ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಸೈಬರ್ ಅಪರಾಧ ಹಾಗೂ ಸಂಚಾರ ಸುರಕ್ಷತೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಸೋಮವಾರಪೇಟೆ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸೋಮವಾರಪೇಟೆಯ ಸಂತ ಜೋಸೆಫರ ಪಿಯು ಕಾಲೇಜು ಮತ್ತು ನೇರುಗಳಲೆ ಗ್ರಾಮದ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಪರಿಣಾಮ, ರಸ್ತೆ ಮತ್ತು ಸಂಚಾರ ಸುರಕ್ಷತೆ, ಪೋಕ್ಸೋ ಕಾಯ್ದೆ, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ಕುಟ್ಟ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಕುಟ್ಟ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ರಸ್ತೆ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ ಕಾಯ್ದೆ ಮತ್ತು ಮಾದಕ ದ್ರವ್ಯ ಬಳಕೆಯಿಂದಾಗುವ ಪರಿಣಾಮಗಳು, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ಗರ್ವಾಲೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಕ್ಕಪಡೆಯ ಅಧಿಕಾರಿಗಳು ಭಾಗವಹಿಸಿ ಮಕ್ಕಳಿಗೆ ಮಕ್ಕಳ ಹಕ್ಕುಗಳು, ಸಂಚಾರ ಸುರಕ್ಷತೆ ಮುಂತಾದ ವಿಷಯಗಳ ಕಾನೂನು ಅರಿವು ಮೂಡಿಸಿದರು.









