ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ವತಿಯಿಂದ ವಲಸೆ ಕಾರ್ಮಿಕರ ಸಮಸ್ಯೆ ಸೇರಿದಂತೆ ವಿವಿಧ ಜನಪರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಲಾಯಿತು.
ಕೊಡಗು ಜಿಲ್ಲಾ ಅಧ್ಯಕ್ಷರಾದ ಕಲಾ ಪ್ರಕಾಶ್, ವಿರಾಜಪೇಟೆ ತಾಲೂಕು ಅಧ್ಯಕ್ಷರು ಹಾಗೂ ಉಸ್ತುವಾರಿ ಬೆಲ್ಲು ಕಾರ್ಯಪ್ಪ, ಜಿಲ್ಲಾ ಉಸ್ತುವಾರಿ ತನು ಕಿಶೋರ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು DC ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಮನವಿ ಪತ್ರದಲ್ಲಿ ಜಿಲ್ಲೆಗೆ ಹೊರರಾಜ್ಯಗಳಿಂದ ಆಗಮಿಸುತ್ತಿರುವ ವಲಸೆ ಕಾರ್ಮಿಕರ ಸಮಗ್ರ ನೋಂದಣಿ, ಅವರ ಗುರುತಿನ ಪರಿಶೀಲನೆ, ವಾಸ್ತವ್ಯದ ಮೇಲ್ವಿಚಾರಣೆ ಹಾಗೂ ಕಾನೂನುಬದ್ಧ ನಿಯಮಗಳ ಕಟ್ಟುನಿಟ್ಟಿನ ಅನುಸರಣೆ ಮಾಡುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಲಾಗಿದೆ. ಸಾರ್ವಜನಿಕರ ಭದ್ರತೆ ಮತ್ತು ಶಾಂತಿ ಕಾಪಾಡುವ ದೃಷ್ಟಿಯಿಂದ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಇದೇ ವೇಳೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವುದು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವಂತೆ ಕೂಡ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.
ಜಿಲ್ಲಾಧಿಕಾರಿಗಳು ಮನವಿಯನ್ನು ಸ್ವೀಕರಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ಇತರ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.







