
ಸಿದ್ದಾಪುರ ಏ.24 NEWS DESK : ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆ ಶುಕ್ರವಾರ ಯಶಸ್ವಿಯಾಗಿ ಅರಣ್ಯಕ್ಕೆ ಅಟ್ಟಿತು. ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಿಂದ ಹೊರಬಂದು ಕೃಷಿ ಭೂಮಿಗಳಲ್ಲಿ ಸಂಚರಿಸುತ್ತಿದ್ದ 2 ಮರಿಯಾನೆಗಳಿದ್ದ 9 ಕಾಡಾನೆಗಳ ಹಿಂಡು ಗ್ರಾಮಸ್ಥರಲ್ಲಿ ಆತಂಕವನ್ನು ಹುಟ್ಟು ಹಾಕಿತ್ತು. ಪರಿಸ್ಥಿತಿಯನ್ನು ಗಮನಿಸಿದ ಅರಣ್ಯ ಇಲಾಖಾ ಸಿಬ್ಬಂದಿಗಳು ಕಾರ್ಯಾಚರಣೆ ಮೂಲಕ ಕಾಡಾನೆಗಳನ್ನು ಮರಳಿ ಅರಣ್ಯ ಪ್ರದೇಶಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಡಾನೆಗಳ ಹಿಂಡು ಗಾಮೀಣ ಭಾಗದಿಂದ ಅರಣ್ಯಕ್ಕೆ ಮರಳಿರುವುದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ. ಕಾರ್ಯಾಚರಣೆಯನ್ನು ಚೆನ್ನಂಗಿ ಸೆಕ್ಷನ್‍ನ ಉಪವಲಯ ಅರಣ್ಯಾಧಿಕಾರಿ ಪಿ.ಟಿ. ಶಶಿ ನೇತೃತ್ವದಲ್ಲಿ ಆರ್.ಆರ್.ಟಿ.ಸಿಬ್ಬಂದಿಗಳು ಯಶಸ್ವಿಯಾಗಿ ನಡೆಸಿದರು.









