
ಮಡಿಕೇರಿ ಮೇ 3 NEWS DESK : ಕೊಡ್ಲಿಪೇಟೆ ಕಲ್ಲುಮಠದ ಎಸ್.ಕೆ.ಎಸ್. ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆ, ಕಲ್ಲು ಮಠ, ಇಲ್ಲಿ 2026–27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಶ್ರೀ ಶ್ರೀ ಚರಮೂರ್ತಿ ಮಹಾಂತ ಸ್ವಾಮೀಜಿಯವರು ಆಗಮಿಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದರು ಹಾಗೂ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹೂಗುಚ್ಛ ಹಾಗೂ ಬಲೂನುಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾದ ವಿಶ್ವನಾಥ್, ಕಾರ್ಯದರ್ಶಿಗಳಾದ ಎಚ್.ಎಂ ದಿವಾಕರ್, ಶಾಲೆಯ ಮುಖ್ಯ ಶಿಕ್ಷಕರಾದ ಅಭಿಲಾಶ್ ಎಚ್.ಎಂ. ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಹೊಸ ಶೈಕ್ಷಣಿಕ ವರ್ಷದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಕಾರ್ಯಕ್ರಮದ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಿ ಮುಂದಿನ ದಿನಗಳಲ್ಲಿ ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ಆರೋಗ್ಯ ಹಾಗೂ ಪೌಷ್ಟಿಕ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯೇ ಶಿಕ್ಷಣದ ಮುಖ್ಯ ಉದ್ದೇಶವಾಗಿದ್ದು, ಅದಕ್ಕಾಗಿ ಶ್ರಮಿಸುವಂತೆ ಪ್ರೇರೇಪಿಸಿದರು ಹಾಗೂ ಉತ್ತಮ ವೃತ್ತಿಜೀವನವನ್ನು ರೂಪಿಸಿಕೊಳ್ಳುವಂತೆ ಆಶೀರ್ವದಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಬಾದಾಮಿ, ದ್ರಾಕ್ಷಿ, ಗೋಡಂಬಿ, ಉತ್ತುತ್ತೆ ಮಿಶ್ರೀತ ಸಿಹಿತಿಂಡಿಯನ್ನು ವಿತರಿಸಿ ಸಂತೋಷ ಹಂಚಲಾಯಿತು.









