
ಮಡಿಕೇರಿ ಜೂ.6 NEWS DESK : ಕರ್ನಾಟಕ ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಗೌರವಯುತವಾಗಿ ಬಾಳ್ವೆ ನಡೆಸಲು ಬೇಕಾದ ಎಲ್ಲಾ ಸವಲತ್ತುಗಳನ್ನು ಆದ್ಯತೆ ಮೇರೆಗೆ ಒದಗಿಸುತ್ತಾ ಬಂದಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕು 18 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಆಯ್ಕೆ ಆಗಿರುವ ಅರ್ಹ ಫಲಾನುಭವಿಗಳಿಗೆ ನೂತನ ಮನೆ ನಿರ್ಮಾಣ ಕಾಮಗಾರಿ ಆದೇಶ ಪ್ರತಿ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 400 ಕ್ಕೂ ಅಧಿಕ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದರು. ನಿವೇಶನ ಮತ್ತು ವಸತಿ ರಹಿತರಿಗೆ ವಸತಿ ನೀಡುವುದು ಸರ್ಕಾರದ ಕರ್ತವ್ಯ. ಹಲವು ವರ್ಷಗಳಿಂದ ಸರ್ಕಾರದಿಂದ ಮನೆ ನಿರ್ಮಿಸಬೇಕು, ನಿವೇಶನ ರಹಿತರು, ವಸತಿ ರಹಿತರಿಗೆ ಆದ್ಯತೆ ಮೇರೆಗೆ ಸ್ವಂತ ಸೂರು ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಹಲವಾರು ಜನಪರ ಯೋಜನೆಗಳೊಂದಿಗೆ ವಸತಿ ನೀಡುವ ಯೋಜನೆಗೂ ಮಹತ್ವ ನೀಡಿದೆ ಎಂದು ಶಾಸಕರು ಹೇಳಿದರು. ಅಂದಿನ ವಸತಿ ಸಚಿವರಾದ ಜಮೀರ್ ಅಹಮ್ಮದ್ ಅವರು ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಸಂಪುಟಗಳ ಸದಸ್ಯರ ಸಹಕಾರದಿಂದ ಜಿಲ್ಲೆಗೆ ಮನೆ ನಿರ್ಮಾಣಕ್ಕೆ ಅನುದಾನ ದೊರೆತಿದೆ ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು. ಮಳೆಗಾಲ ಪ್ರಾರಂಭಕ್ಕೂ ಮೊದಲು ಮನೆ ಹಸ್ತಾಂತರ ಮಾಡುವ ಯೋಜನೆ ಇದ್ದು, ಇದರ ಸದುಪಯೋಗ ಜನರು ಪಡೆದುಕೊಂಡು, ತಮ್ಮ ಅನುಕೂಲಕ್ಕನುಸಾರ ಮನೆ ನಿರ್ಮಿಸಿ ಉತ್ತಮ ಜೀವನ ನಡೆಸುವಂತಾಗಲಿ ಎಂದು ಶಾಸಕರು ಶುಭ ಹಾರೈಸಿದರು. ಮುಂದಿನ ದಿನಗಳಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮ ನಡೆಯಲ್ಲಿದ್ದು, ಸಣ್ಣ ಸಣ್ಣ ಹೆಜ್ಜೆಯ ಮೂಲಕ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿ ಆಯ್ಕೆ ಮಾಡಿದ ಉದ್ದೇಶ ಬದ್ಧತೆಯಿಂದ ಮಾಡಲಾಗುವುದೆಂದು ಭರವಸೆ ನೀಡಿದರು. ಮಡಿಕೇರಿ ತಾಲ್ಲೂಕು ಪಂಚಾಯಿತಿ ಇ.ಒ.ಶೇಖರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ಸೂರು ಒದಗಿಸುವಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಜಿಲ್ಲೆಗೆ 1200 ಮನೆಗಳ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರು ಮಾಡಿರುವುದು ಶ್ಲಾಘನೀಯ ಎಂದರು. ವಿರಾಜಪೇಟೆ ಕ್ಷೇತ್ರ ಭೌಗೋಳಿಕವಾಗಿ ಹೆಚ್ಚಿನ ವಿಸ್ತೀರ್ಣ ಹೊಂದಿರುವುದರಿಂದ ವಿರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿಗೆ 527 ಮನೆಗಳ ನಿರ್ಮಾಣಕ್ಕೆ ಮುಂದಾಗಿದೆ. ಮೊದಲ ಹಂತದಲ್ಲಿ ವಿರಾಜಪೇಟೆ ವಿಧಾನಸಭಾ ವ್ಯಾಪ್ತಿಯ ಪೆರಾಜೆ, ಚೆಂಬು, ಸಂಪಾಜೆ, ಮದೆ, ಬೆಟ್ಟಗೇರಿ, ಚೇರಂಬಾಣೆ, ಕುಂದಚೇರಿ ಭಾಗಮಂಡಲ, ಕರಿಕೆ, ಅಯ್ಯಂಗೇರಿ, ಬಲ್ಲಮಾವಟಿ, ಎಮ್ಮೆಮಾಡು ನಾಪೋಕ್ಲು, ಕುಂಜಿಲ-ಕಕ್ಕಬ್ಬೆ, ನರಿಯಂದಡ, ಹಾಕತ್ತೂರು, ಮೇಕೇರಿ, ಕೊಣಂಜಗೇರಿ ಗ್ರಾ.ಪಂ.ವ್ಯಾಪ್ತಿಯ 427 ಅರ್ಹ ಕುಟುಂಬಗಳಿಗೆ ಶಾಶ್ವತ ಸೂರು ಒದಗಿಸುವ ಸಂಬಂಧ ಪ್ರಯತ್ನ ನಡೆದಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದಿಂದ ನಿವೇಶನ ಗುರುತಿಸಿ ಫಲಾನುಭವಿಗಳಿಗೆ ಮನೆ ನಿರ್ಮಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಮಡಿಕೇರಿ ತಾಲೂಕು ಅಭಿವೃದ್ಧಿ ಮತ್ತು ಯೋಜನೆಗಳ ಸಮಿತಿಯ ಉಪಾಧ್ಯಕ್ಷರಾದ ಬಾಲಚಂದ್ರ ನಾಯರ್, ಕೊಡಗು ಜಿಲ್ಲಾ ಪಂಚಾಯಿತಿ ಯೋಜನೆ ನಿರ್ದೇಶಕರಾದ ಜೀವನ್ ಕುಮಾರ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರಾದ ಹನೀಫ್, ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷರಾದ ರಫೀಕ್, ಕಕ್ಕಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಲಿಯಂಡ ಸಂಪನ್ ಅಯ್ಯಪ್ಪ, ಚೆಟ್ಟಿಮನಿ ಪಂಚಾಯಿತಿ ಮಾಜಿ ಸದಸ್ಯರಾದ ಹ್ಯಾರೀಶ್, ಮೇಕೇರಿ ಪಂಚಾಯಿತಿ ಮಾಜಿ ಸದಸ್ಯರಾದ ಹನೀಫ್, ಪ್ರಮುಖರಾದ ಸೂರಜ್ ಹೊಸೂರು, ಕೋಡಿರ ವಿನೋದ್ ನಾಣಯ್ಯ, ಅಪ್ರು ರವೀಂದ್ರ, ಪಿ.ಎಲ್.ಸುರೇಶ್, ತುಳಸಿ ಗಾಂಧಿ ಪ್ರಸಾದ್, ಮಡಿಕೇರಿ ತಾಲೂಕು ಎಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರುಗಳು, ಮಾಜಿ ಸದಸ್ಯರು, ಫಲಾನುಭವಿಗಳು ಇದ್ದರು.










