
ಮಡಿಕೇರಿ NEWS DESK ಜೂ.10 : ನಗರದ ಹೃದಯಭಾಗದಲ್ಲಿರುವ ಹಲವು ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಸಂಪಿಗೆಕಟ್ಟೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಚಾಲಕರು, ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ನಿತ್ಯ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕರು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ರಸ್ತೆ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಯುವ ಘಟಕದ ಜಿಲ್ಲಾಧ್ಯಕ್ಷ ಎಂ.ಕೆ.ಆಶಿಕ್ ಒತ್ತಾಯಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಸಂಪಿಗೆಕಟ್ಟೆ ರಸ್ತೆ ಅಭಿವೃದ್ಧಿ ಕಂಡಿಲ್ಲ. ಪ್ರಸ್ತುತ ಮಳೆಗಾಲವಾಗಿರುವುದರಿಂದ ರಸ್ತೆಯ ಗುಂಡಿಗಳಲ್ಲಿ ಮಳೆನೀರು ನಿಲ್ಲುತ್ತಿದೆ. ಪ್ರತಿದಿನ ದ್ವಿಚಕ್ರ ವಾಹನ ಸವಾರರು ಗುಂಡಿಗಳಿಗೆ ಬಿದ್ದು ಗಾಯಗೊಳ್ಳುತ್ತಿದ್ದಾರೆ. ಅದರಲ್ಲೂ ರಾತ್ರಿ ವೇಳೆ ಈ ರಸ್ತೆಯಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ. ಪ್ರತಿದಿನ ಇದೇ ರಸ್ತೆಯಲ್ಲಿ ರಾಜರಾಜೇಶ್ವರಿ ವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಜೀವದ ಹಂಗು ತೊರೆದು ಅಪಾಯಕಾರಿ ಗುಂಡಿಗಳ ನಡುವೆಯೇ ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇದು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಅಲ್ಲದೆ ರಸ್ತೆ ಅವ್ಯವಸ್ಥೆ ಮಡಿಕೇರಿ ಹಾಗೂ ಕೊಡಗು ಜಿಲ್ಲೆಯ ಪ್ರವಾಸೋದ್ಯಮದ ಹೆಸರಿಗೆ ಕಪ್ಪುಚುಕ್ಕೆಯಾಗಿದೆ ಎಂದು ದೂರಿದ್ದಾರೆ. ಸ್ಥಳೀಯ ಆಡಳಿತದ ಕಡೆಗಣನೆಯಿಂದಾಗಿ ರಸ್ತೆ ಈ ಮಟ್ಟಕ್ಕೆ ತಲುಪಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಕ್ಷಣ ಸ್ಥಳ ಪರಿಶೀಲನೆ ನಡೆಸಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವ ಮತ್ತು ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಆ ಮೂಲಕ ಸಂಭಾವ್ಯ ಅನಾಹುತಗಳನ್ನು ತಪ್ಪಿಸಬೇಕೆಂದು ಎಂ.ಕೆ.ಆಶಿಕ್ ಒತ್ತಾಯಿಸಿದ್ದಾರೆ. ನಗರದ ಉಳಿದ ರಸ್ತೆಗಳ ಅಭಿವೃದ್ಧಿಗೂ ತುರ್ತು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.








