
ಮಡಿಕೇರಿ NEWS DESK ಜು.24 : ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆೆಯಾಗುತ್ತಿದ್ದು, ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾರಂಗಿ ಅಣೆಕಟ್ಟೆಯಿಂದ ಜು.25 ರಂದು ಮಧ್ಯಾಹ್ನ 3 ಸಾವಿರರಿಂದ 5 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿ ಬಿಡಲಾಗುತ್ತದೆ ಎಂದು ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಮಹೇಶ್ ಎಂ.ಎಸ್ ತಿಳಿಸಿದ್ದಾರೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳಾಗಿದ್ದು, ಇಂದಿನ ಮಟ್ಟ 2856 ಆಗಿದ್ದು, ಬಹುತೇಕ ಜಲಾಶಯ ಭರ್ತಿಯಾಗಿದೆ. ಜಲಾಶಯದ ಜಲಾನಯನ ಪ್ರದೇಶಗಳಾದ ಹಟ್ಟಿಹೊಳೆÉ, ಮಾದಾಪುರ ವಿಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯದ ಒಳಹರಿವಿನ ಮಟ್ಟ 4500 ಕ್ಯುಸೆಕ್ ನಷ್ಟಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಜು.25ರಂದು ಮಧ್ಯಾಹ್ನ 2 ಗಂಟೆಯ ನಂತರ ನೀರನ್ನು ನದಿಗೆ ಹರಿಸುವುದರಿಂದ ಸುತ್ತಮುತ್ತಲಿನ ಜನರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ. ಹಾರಂಗಿ ಮತ್ತು ಕಾವೇರಿ ನದಿ ಪಾತ್ರದಲ್ಲಿರುವ, ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಹೇಶ್ ಎಂ.ಎಸ್ ಕೋರಿದ್ದಾರೆ.









