
ಚೆಟ್ಟಳ್ಳಿ ಜು.27 NEWS DESK : ಕೊಡಗು ಜಿಲ್ಲೆಯಲ್ಲಿ ಈ ಬಾರಿಯ ಮಳೆಗಾಲದಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದ ಹಿನ್ನೆಲೆಯಲ್ಲಿ, ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷರು ಹಾಗೂ ಜನಪರ ಹೋರಾಟ ಸಮಿತಿಯ ಸಂಚಾಲಕರಾದ ಬಲ್ಲಾರಂಡ ಮಣಿ ಉತ್ತಪ್ಪ ಅವರ ನೇತೃತ್ವದಲ್ಲಿ, ಮಳೆಯ ದೇವರೆಂದೇ ಆರಾಧಿಸಲ್ಪಡುವ ಪಾಡಿ ಇಗ್ಗುತ್ತಪ್ಪ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ನೆರವೇರಿಸಲಾಯಿತು. ಈ ವರ್ಷ ಮಳೆ ಅಲ್ಪ ಪ್ರಮಾಣದಲ್ಲಿ ಸುರಿದಿರುವುದರಿಂದ ಕೃಷಿ ಚಟುವಟಿಕೆಗಳು ಹಿನ್ನಡೆ ಅನುಭವಿಸುತ್ತಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಕೃಷಿ ಕಾರ್ಯಗಳು ಸುಗಮವಾಗಿ ಸಾಗಲಿ, ರೈತರ ಬದುಕಿಗೆ ಸಮೃದ್ಧಿ ದೊರಕಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ಈ ಸಂದರ್ಭ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಪೇರಿಯನ ಪೂರ್ಣಚ್ಚ, ನಿರ್ದೇಶಕರಾದ ಬಟ್ಟೀರ ಶರಿನ್, ಕೊಂಗೇಟಿರ ವಾಣಿ ಕಾಳಪ್ಪ, ಮುಳ್ಳಂಡ ಮಾಯಮ್ಮ, ಚೋಳಪಂಡ ವಿಜಯ್ ಹಾಗೂ ಗಣೇಶ್ ಇದ್ದರು.
ವರದಿ : ಕರುಣ್ ಕಾಳಯ್ಯ









