
ವಿರಾಜಪೇಟೆ ಆ.3 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ವಿರಾಜಪೇಟೆ ತಾಲೂಕಿನ ಕಾನೂರು ವಲಯದ ಕುಟ್ಟ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಶಿಕ್ಷಕರಾದ ದಿನೇಶ್ ಉದ್ಘಾಟಿಸಿ ಮಾತನಾಡಿ, ಧರ್ಮಸ್ಥಳ ಯೋಜನೆಯ ಜನಮಂಗಳ ಕಾರ್ಯಗಳು ಹಾಗೂ ಸಮಾಜಮುಖಿ ವಿಚಾರಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಡಾ. ಕಾರ್ಯಪ್ಪ ಅವರು, “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋೀಜನೆಯು ಅನೇಕ ಜನಮಂಗಳ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಪ್ರತಿವರ್ಷ ಆಯೋಜಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿನ ಬೆಳವಣಿಗೆಗಳು ಹಾಗೂ ಮಕ್ಕಳ ಕುತೂಹಲದ ಗುಣದಿಂದಾಗಿ ಕೆಲವರು ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಇದರಿಂದ ಕ್ಯಾನ್ಸರ್ ನಂತಹ ಮಾರಕ ರೋಗಗಳು ಬರುವ ಅಪಾಯವಿದ್ದು, ಜೀವನ ಕತ್ತಲತ್ತ ತಳ್ಳಲ್ಪಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ದುಶ್ಚಟ ಮುಕ್ತ ಜೀವನವನ್ನು ಅಳವಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು”ಎಂದು ಮಕ್ಕಳಿಗೆ ಮನಮುಟ್ಟುವಂತೆ ತಿಳಿಸಿದರು. ಇದೇ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಪ್ರತಾಪ್ ದೇವಾಡಿಗ, ಪೂಜೆಕಲ್ಲು ಒಕ್ಕೂಟದ ಅಧ್ಯಕ್ಷರಾದ ರಾಜೇಶ್, ಮಾಜಿ ಅಧ್ಯಕ್ಷರಾದ ಲೀಲಾ ಪ್ರಭು, ಸೇವಾ ಪ್ರತಿನಿಧಿ ಹೇಮಾವತಿ, ಶಾಲೆಯ ಶಿಕ್ಷಕ ವೃಂದ ಹಾಗೂ 85 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.









