
ಮಡಿಕೇರಿ ಆ.6 NEWS DESK : ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಗುಜರಾತ್ ನ ಅಹಮದಾಬಾದ್ ನಲ್ಲಿ ತೆಗೆದುಕೊಂಡ ನಿರ್ಣಯದಂತೆ “ಸಂಘಟನಾ ಸೃಜನ್ ಅಭಿಯಾನ್” ಮೂಲಕ ಕರ್ನಾಟಕ ರಾಜ್ಯದಲ್ಲೂ ಪಕ್ಷ ಸಂಘಟನೆಗೆ ಒತ್ತು ನೀಡಿ ಅಭಿಯಾನವನ್ನು ಚುರುಕುಗೊಳಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಕೇರಳದ ನಾದಪುರಂ ಕ್ಷೇತ್ರದ ಶಾಸಕ ಅಭಿಜಿತ್ ಕೆ.ಎಂ ಅವರು ತಿಳಿಸಿದ್ದಾರೆ. “ಸಂಘಟನಾ ಸೃಜನ್ ಅಭಿಯಾನ್” ದ ಭಾಗವಾಗಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹಕ್ಕಾಗಿ ಮಡಿಕೇರಿಗೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಭರ್ತಿ ಮಾಡಲು ಸಿದ್ಧಪಡಿಸಿರುವ ಅರ್ಜಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ದೇಶದಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ನಡೆಯುತ್ತಿದ್ದು, ರಾಜ್ಯವ್ಯಾಪಿ ಪ್ರವಾಸ ಕೈಗೊಂಡು ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲೂ ಪಕ್ಷದ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯಲಿದ್ದು, ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಾಂಗ್ರೆಸ್ ಪಕ್ಷದ ಮೂಲಕ ಜನಸೇವೆಯಲ್ಲಿ ಸಕ್ರಿಯರಾಗಿರುವ ಯಾರು ಬೇಕಾದರೂ ಅಧ್ಯಕ್ಷ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ, ಬ್ಲಾಕ್ ಸೇರಿದಂತೆ ಎಲ್ಲಾ ಘಟಕಗಳ ಪ್ರಮುಖರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಮಾಜಿ ಸದಸ್ಯರು, ಮಾಜಿ ಸಂಸದರು, ಕಾರ್ಯಕರ್ತರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಿ ವರದಿಯನ್ನು ಎಐಸಿಸಿಗೆ ಸಲ್ಲಿಸಲಾಗುವುದು. ಈ ವರದಿಯನ್ನಾಧರಿಸಿ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದರು. ಮತ್ತೊಬ್ಬ ಉಸ್ತುವಾರಿ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಆರ್.ವಿ.ವೆಂಕಟೇಶ್ ಅವರು ಮಾತನಾಡಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ “ಸಂಘಟನಾ ಸೃಜನ್ ಅಭಿಯಾನ್” ವನ್ನು ರಾಜ್ಯವ್ಯಾಪಿ ಕಳೆದ 15 ದಿನಗಳಿಂದ ನಡೆಸಲಾಗುತ್ತಿದೆ. ಪಕ್ಷದ ಆಧಾರ ಸ್ತಂಭವಾಗಿರುವ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಕೊಡಗು ಜಿಲ್ಲೆಯ 6 ಬ್ಲಾಕ್ ಗಳಿಗೆ ಪ್ರತ್ಯೇಕವಾಗಿ ಉಸ್ತುವಾರಿಗಳು ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಉಸ್ತುವಾರಿಗಳಾದ ಡಿ.ಕೆ.ಬ್ರಿಜೇಶ್, ಮಮತಾ ಗಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಎಲ್. ಉಪಸ್ಥಿತರಿದ್ದರು.









