
ಮಡಿಕೇರಿ ಆ.17 NEWS DESK : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಘಟ್ಟದಳ್ಳ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲ್(44) ಮೃತ ದುರ್ದೈವಿ. ಮತ್ತೊಬ್ಬ ಕಾರ್ಮಿಕ ಜಾದವ್(26) ಗಂಭೀರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹತ್ತಕ್ಕೂ ಹೆಚ್ಚು ಕಾರ್ಮಿಕರು ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಅರಣ್ಯದಂಚಿನಿಂದ ಬಂದ ಕಾಡಾನೆ ಕಾರ್ಮಿಕರ ಮೇಲೆ ದಿಢೀರ್ ದಾಳಿ ಮಾಡಿದೆ. ಈ ಸಂದರ್ಭ ಇತರ ಕಾರ್ಮಿಕರು ಸ್ಥಳದಿಂದ ಓಡಿ ಪ್ರಾಣಪಾಯದಿಂದ ಪಾರಾಗಿದ್ದು, ಕಾಡಾನೆ ದಾಳಿಗೆ ಸಿಲುಕಿದ ಗೋಪಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಾದವ್ ಎಂಬುವವರ ಕಾಲು ಮತ್ತು ಕೈ ಮುರಿಯಲ್ಪಟ್ಟಿದ್ದು, ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಂ, ಸಿಬ್ಬಂದಿಗಳು, ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. *ಕಾರ್ಮಿಕರ ಅಸಮಾಧಾನ* ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಮೃತ ದೇಹವನ್ನು ತೆಗೆಯಲು ಬಿಡದೆ ಅಧಿಕಾರಿಗಳ ವಿರುದ್ಧ ಕಾರ್ಮಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಪ್ರತಿಭಟನಾಕಾರರ ಮನವೊಲಿಸಿ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರು. ಮೃತದೇಹವನ್ನು ಸಿದ್ದಾಪುರ ಆಸ್ಪತ್ರೆಗೆ ತಂದ ಸಂದರ್ಭ ಸ್ಥಳೀಯರು ಹಾಗೂ ಕಾರ್ಮಿಕ ಸಂಘಟನೆಯ ಪ್ರಮುಖರು ರಸ್ತೆ ತಡೆ ನಡೆಸಿ ಅರಣ್ಯ ಇಲಾಖೆ ಮತ್ತು ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಕಾಡು ಪ್ರಾಣಿಗಳ ಹಾವಳಿಯಿಂದ ಕೊಡಗಿನ ರೈತರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ನೆಮ್ಮದಿ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ಮರುಕಳಿಸುತ್ತಿದೆ, ಅಮಾಯಕ ಜೀವಗಳು ಬಲಿಯಾಗುತ್ತಿದೆ. ವೈಜ್ಞಾನಿಕವಾಗಿ ಹಾಗೂ ಶಾಶ್ವತವಾಗಿ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಕಾರ್ಮಿಕ ಸಂಘಟನೆಯ ಮುಖಂಡ ಪಿ.ಆರ್.ಭರತ್ ಅವರು ಎಚ್ಚರಿಕೆ ನೀಡಿದರು.










