
ಮಡಿಕೇರಿ ಆ.18 NEWS DESK : ಮಾನವ–ಪ್ರಾಣಿ ಸಂಘರ್ಷ ಹಾಗೂ ಜಮ್ಮಾಮಲೆ ಸಮಸ್ಯೆ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ವಿಸ್ತೃತವಾಗಿ ಚರ್ಚಿಸಿದರು. ಕ್ಷೇತ್ರದಲ್ಲಿ ಹಾಗೂ ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಸಚಿವರಿಗೆ ಸಂಪೂರ್ಣ ಮಾಹಿತಿ ನೀಡಿದ ಶಾಸಕ ಪೊನ್ನಣ್ಣ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವ ರಾಮಲಿಂಗಾರೆಡ್ಡಿ ಅವರು, ವಿಧಾನಸಭಾ ಅಧಿವೇಶನದ ಕಲಾಪ ಮುಗಿದ ಕೂಡಲೇ ಕೊಡಗು ಜಿಲ್ಲೆಗೆ ಭೇಟಿ ನೀಡಿ, ಸ್ಥಳೀಯ ಸಮಸ್ಯೆಗಳ ಕುರಿತು ಅಧಿಕಾರಿಗಳು ಹಾಗೂ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಮಾಹಿತಿ ಪಡೆಯುವುದಾಗಿ ಭರವಸೆ ನೀಡಿದರು. ಅರಣ್ಯ ಸಚಿವರು ಇದೇ ತಿಂಗಳ 28ರಂದು ಜಿಲ್ಲೆಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಜಮ್ಮಾಮಲೆ ಅಧ್ಯಕ್ಷ ಪೆಮ್ಮಯ್ಯ, ನಿರ್ದೇಶಕರಾದ ಚಿನ್ನಪ್ಪ, ಪೂವಯ್ಯ, ಸೋಮಣ್ಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.









