
ಕುಶಾಲನಗರ ಆ.18 NEWS DESK : ಕಾಡಾನೆಗಳ ಹಾವಳಿ ತಡೆಗಟ್ಟಿ ರೈತರ ಆಸ್ತಿ ಹಾಗೂ ಬೆಳೆಗಳನ್ನು ರಕ್ಷಿಸಲು ಶಾಶ್ವತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸುಂಟಿಕೊಪ್ಪ ರೈತ ಸಂಘದ ವತಿಯಿಂದ ಕುಶಾಲನಗರ ವಲಯ ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲಾಯಿತು. ಸುಂಟಿಕೊಪ್ಪ ಹೋಬಳಿಯ ಹೇರೂರು, ಕಲ್ಲೂರು, ನಾಕೂರು, ಶಿರಂಗಾಲ, ಕಂಬಿಬಾಣೆ, ಸುಂಟಿಕೊಪ್ಪ, ಕೊಡಗರಹಳ್ಳಿ ಹಾಗೂ ಕೆದಕಲ್ ಭಾಗಗಳ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದ್ದು, ರೈತರು ಆತಂಕದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್ ಅವರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ, ರೈತರು ತಮ್ಮ ಬೇಡಿಕೆಯಲ್ಲಿ ಪಟ್ಟು ಹಿಡಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಆನೆ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಆದರೆ, ಜಿಲ್ಲೆಯ ಹಿರಿಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಪಷ್ಟ ಭರವಸೆ ನೀಡುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ರೈತರು ಪಟ್ಟು ಹಿಡಿದರು. ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಸಂಜೆವರೆಗೂ ಯಾವುದೇ ಹಿರಿಯ ಅಧಿಕಾರಿ ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಅರಣ್ಯ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದರು. ರೈತ ಸಂಘದ ಪ್ರಮುಖರಾದ ಕ್ಲೈವ್ ಪೊನ್ನಪ್ಪ ಹಾಗೂ ಪದಾಧಿಕಾರಿ ಚಂದ್ರಶೇಖರ್ ಹೇರೂರು ಮಾತನಾಡಿ, ಕಳೆದ ಹಲವು ವರ್ಷಗಳಿಂದ ಕಾಡಾನೆಗಳು ನಿರಂತರವಾಗಿ ನಾಡಿಗೆ ನುಗ್ಗಿ ರೈತರ ಬೆಳೆ ಹಾಗೂ ಆಸ್ತಿಗೆ ಹಾನಿ ಉಂಟುಮಾಡುತ್ತಿವೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿಫಲವಾಗಿವೆ ಎಂದು ಆರೋಪಿಸಿದರು. ರೈತರ ಬದುಕು ಮತ್ತು ಆಸ್ತಿಪಾಸ್ತಿಗೆ ರಕ್ಷಣೆ ನೀಡಲು ಪರಿಣಾಮಕಾರಿ ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು. ಬಿಜೆಪಿ ಪ್ರಮುಖ ಬಿ.ಬಿ. ಭಾರತೀಶ್ ಮಾತನಾಡಿ, ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲವಾಗಿ ಧ್ವನಿ ಸೇರಿಸಲಿದೆ. ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಅರಣ್ಯ ಇಲಾಖೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ಸಮಸ್ಯೆ ಕುರಿತು ಚರ್ಚಿಸಿದರು. ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ. ಮಂತರ್ ಗೌಡ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಪ್ರತಿಭಟನೆಯ ಕುರಿತು ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1ರಂದು ಜಿಲ್ಲೆಯಲ್ಲಿ ನಡೆಯುತ್ತಿರುವ ಆನೆ–ಮಾನವ ಸಂಘರ್ಷದ ಕುರಿತು ಹಿರಿಯ ಅರಣ್ಯ ಅಧಿಕಾರಿಗಳು ಹಾಗೂ ರೈತ ಪ್ರಮುಖರೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಿಳಿಸಿದ್ದಾರೆ ಎಂದು ಶಶಿಧರ್ ಹೇಳಿದರು. ಬಿಜೆಪಿ ತಾಲೂಕು ಅಧ್ಯಕ್ಷ ಗೌತಮ್ ಗೌಡ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು. ಆನೆ–ಮಾನವ ಸಂಘರ್ಷಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆ ತಕ್ಷಣ ಶಾಶ್ವತ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು. ರೈತರ ಜೀವ, ಆಸ್ತಿ ಹಾಗೂ ಬೆಳೆಗಳ ರಕ್ಷಣೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಪಷ್ಟ ಭರವಸೆ ನೀಡುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ರೈತ ಮುಖಂಡರು ತಿಳಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಪ್ರಮುಖರಾದ ಅರುಣ್ ಚೆಂಗಪ್ಪ, ದಾಸಂಡ ರಮೇಶ್ ಚೆಂಗಪ್ಪ, ಕುಂಜಲಿನ ಮಂಜುನಾಥ್, ಅಯ್ಯಣ್ಣ ನಾಕೂರು, ವಸಂತ್ ಹಾರನ್‌ಬೈಲ್, ಹಿತೇಶ್ ಕಾನ್‌ಬೈಲ್, ಜಗನಾಥ್ ಮಂದೋಡಿ, ಪ್ರಶಾಂತ್ ಕಲ್ಲೂರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.









