
ಮಡಿಕೇರಿ ಆ.20 NEWS DESK : ನಗರದ ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ಭಾರತೀಯ ಪುರಾತತ್ವ ಇಲಾಖೆಯವರು ಜಾಗ ನೀಡಿದಲ್ಲಿ ಕೋಟೆ ಆವರಣದಲ್ಲಿ ಶೀಘ್ರವೇ ಹೈಟೆಕ್ ಶೌಚಾಲಯ ನಿರ್ಮಿಸಲಾಗುವುದು. ಈ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿಸಿದರು. ಸರ್ಕಾರಿ ವಸ್ತುಸಂಗ್ರಹಾಲಯದ ಕ್ಯೂರೇಟರ್ ಬಿ.ಪಿ.ರೇಖಾ ಮಾತನಾಡಿ, ನಗರದ ಕೋಟೆಯಲ್ಲಿರುವ ಪುರಾತತ್ವ ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆಯ ವ್ಯಾಪ್ತಿಗೆ ಕೋಟೆ ಅರಮನೆಯನ್ನು ನೀಡಿದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು. ಕೋಟೆಯ ಹಿಂಭಾಗ ಸೇರಿದಂತೆ ಆವರಣದಲ್ಲಿ ಕಾಡು ಬೆಳೆದಿದ್ದು, ಸ್ವಚ್ಛತೆ ಹಾಗೂ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಕೋಟೆಯನ್ನು ರಾಜ್ಯ ಪುರಾತತ್ವ ಇಲಾಖೆಗೆ ವಹಿಸಿದಲ್ಲಿ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಸಮರ್ಪಕವಾಗಿ ಕೈಗೊಳ್ಳಬಹುದು ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು. ಕೋಟೆ ಅರಮನೆಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ರೂ.10 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಈ ಕಾಮಗಾರಿಗಳನ್ನು ಪೂರ್ಣಗೊಳಿಸಿ ಕೋಟೆ ಅರಮನೆಯನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಮಂಜುನಾಥ ರಾಮಣ್ಣ, ಪೌರಾಯುಕ್ತ ಎಚ್.ಆರ್.ರಮೇಶ್, ಎಂಜಿನಿಯರ್ ಹೇಮಂತ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.









