ಮಡಿಕೇರಿ, NEWS DESK ಆಗಸ್ಟ್ 25: ಕೊಡಗು ಜಿಲ್ಲೆಯಲ್ಲಿ ಡಾ. ಕಸ್ತೂರಿ ರಂಗನ್ ವರದಿ ಜಾರಿಯಿಂದ ಉಂಟಾಗಬಹುದಾದ ಸಾಧಕ-ಬಾಧಕಗಳ ಕುರಿತು ಸಮಗ್ರ ಚರ್ಚೆ ನಡೆಸಲು ಜಿಲ್ಲೆಯ ಹಾಲಿ ಹಾಗೂ ಮಾಜಿ ಪ್ರಮುಖ ಜನಪ್ರತಿನಿಧಿಗಳ ವಿಶೇಷ ಸಮಾಲೋಚನಾ ಸಭೆ ಆಯೋಜಿಸಲಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಕಸ್ತೂರಿ ರಂಗನ್ ವರದಿಯ ಶಿಫಾರಸುಗಳ ಜಾರಿಯಿಂದ ಕೊಡಗು ಜಿಲ್ಲೆಯ ಭೌಗೋಳಿಕ ಪರಿಸ್ಥಿತಿ, ಕೃಷಿ, ಪರಿಸರ ಹಾಗೂ ಸಾರ್ವಜನಿಕರ ದೈನಂದಿನ ಬದುಕಿನ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಚರ್ಚಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಹಿತರಕ್ಷಣೆ, ರೈತರು, ಬೆಳೆಗಾರರು ಹಾಗೂ ಸಾರ್ವಜನಿಕರ ಭವಿಷ್ಯದ ದೃಷ್ಟಿಯಿಂದ ಎಲ್ಲರ ಒಮ್ಮತದ ನಿರ್ಧಾರ ಮತ್ತು ಸಲಹೆಗಳನ್ನು ಕ್ರೋಢೀಕರಿಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತಿದೆ.
ಸಂಸದ ಯದುವೀರ್ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿ ನಗರದ ರಾಜದರ್ಶನ್ ಹೋಟೆಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ.
ಕೊಡಗು ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಹಿತದೃಷ್ಟಿಯಿಂದ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಜನಪ್ರತಿನಿಧಿಗಳು ತಪ್ಪದೇ ಪಾಲ್ಗೊಂಡು ತಮ್ಮ ಅಮೂಲ್ಯ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನ ನೀಡುವಂತೆ ಸಂಸದರು ಮನವಿ ಮಾಡಿದ್ದಾರೆ.








