ಮಡಿಕೇರಿ, NEWS DESK ಸೆ.2: ಯುವ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಜಿಲ್ಲೆಯ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ನಾಯಕತ್ವ ಗುಣಗಳನ್ನು ಉತ್ತೇಜಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದರು.
ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ನಾಗರಿಕ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೋಂದಣಿಗೆ ಆಧಾರ್ ಕಡ್ಡಾಯವಾಗಿದ್ದು, 16ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಸಂಘದ ಸದಸ್ಯತ್ವ ಪಡೆಯಲು ಅರ್ಹರಾಗಿದ್ದಾರೆ. ಒಂದು ಸಂಘದ ಘಟಕ ರಚನೆಗೆ ಕನಿಷ್ಠ 100ರಿಂದ 200 ಯುವಜನರು ಸದಸ್ಯರಾಗಿರಬೇಕು. ಪ್ರತಿ ಸದಸ್ಯರು ಗುರುತಿನ ಚೀಟಿಗಾಗಿ ರೂ.10 ನೋಂದಣಿ ಶುಲ್ಕ ಪಾವತಿಸಬೇಕು. ಅರ್ಜಿದಾರರು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಥವಾ ವಾರ್ಡ್ನ ಸಾಮಾನ್ಯ ನಿವಾಸಿಯಾಗಿರಬೇಕು ಹಾಗೂ ಒಬ್ಬರು ಒಂದು ಸಂಘದಲ್ಲಿ ಮಾತ್ರ ಸದಸ್ಯತ್ವ ಪಡೆಯಲು ಅವಕಾಶವಿದೆ ಎಂದು ವಿವರಿಸಿದರು.
ಪ್ರತಿ ಭಾರತ್ ಜೋಡೋ ಯುವ ಸಂಘಕ್ಕೆ ವಾರ್ಷಿಕ ರೂ.10 ಲಕ್ಷ ಅನುದಾನ ಸರ್ಕಾರದಿಂದ ಬಿಡುಗಡೆಯಾಗಲಿದೆ. ಗ್ರಾಮೀಣ ಕ್ರೀಡಾಕೂಟ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲು ಈ ಅನುದಾನ ಸಹಕಾರಿಯಾಗಲಿದೆ. ಅಲ್ಲದೆ, ಪ್ರತಿ ಸಂಘಕ್ಕೆ ತರಬೇತಿದಾರರ ಗೌರವಧನಕ್ಕಾಗಿ ವಾರ್ಷಿಕ ರೂ. 24 ಸಾವಿರ ನೀಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎ. ಹಕೀಂ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್ಗಳಲ್ಲಿ ಯುವ ವೇದಿಕೆ ಸ್ಥಾಪಿಸುವುದು, ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ ಮತ್ತು ನಾಗರಿಕ ಪ್ರಜ್ಞೆ ಬೆಳೆಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಸಮಾನ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶವಿದೆ. ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ತಲಾ ಒಂದು ಭಾರತ್ ಜೋಡೋ ಯುವ ಸಂಘ ಸ್ಥಾಪಿಸಬೇಕಿದ್ದು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪುರಸಭೆಯಲ್ಲಿ ಸರಾಸರಿ 6 ಸಾವಿರ ಜನಸಂಖ್ಯೆಗೆ ಒಂದು ಸಂಘ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಸರಾಸರಿ 8 ಸಾವಿರ ಜನಸಂಖ್ಯೆಗೆ ಒಂದು ಸಂಘ ಸ್ಥಾಪಿಸಬೇಕಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ರಾಹುಲ್ ಮಾರ್ಷಲ್, ಮುತ್ತಣ್ಣ ಕೊಣಿಯಂಡ, ವಿರಾಜಪೇಟೆ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಶಬ್ಬೀರ್ ಹಾಗೂ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಹಂಸ ಕೋಡಿ ಉಪಸ್ಥಿತರಿದ್ದರು.








