
ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಮಾಜಿ ಶಾಸಕಿ ವೀಣಾ ಅಚ್ಚಯ್ಯ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ. ಬೋಪಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣ್ಯ ಸೇರಿದಂತೆ ಕಸ್ತೂರಿರಂಗನ್ ಹೋರಾಟ ಸಮಿತಿಯ ಸದಸ್ಯರು, ನಾಡಿನ ಪ್ರಮುಖರು ಹಾಗೂ ಹೋರಾಟಗಾರರು ಉಪಸ್ಥಿತರಿದ್ದರು. ಸಭೆಯಲ್ಲಿ ಸಾರ್ವಜನಿಕರು ತಮ್ಮ ಆತಂಕ, ಅಭಿಪ್ರಾಯ ಹಾಗೂ ಸಲಹೆಗಳನ್ನು ವ್ಯಕ್ತಪಡಿಸಿದರು. ಕಸ್ತೂರಿರಂಗನ್ ವರದಿ ಜಾರಿಯಿಂದ ಕೊಡಗು ಜಿಲ್ಲೆಯ ಜನಸಾಮಾನ್ಯರು ಹಾಗೂ ರೈತರಿಗೆ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು. ಎಲ್ಲರ ಅಭಿಪ್ರಾಯಗಳನ್ನು ಆಲಿಸಿದ ಬಳಿಕ ಮಾತನಾಡಿದ ಶಾಸಕರು, ಕಸ್ತೂರಿರಂಗನ್ ವರದಿಯನ್ನು ವಿರೋಧಿಸಬೇಕೆಂಬ ಅಭಿಪ್ರಾಯವನ್ನು ಸಭೆಯಲ್ಲಿ ಬಹುತೇಕರು ವ್ಯಕ್ತಪಡಿಸಿದ್ದು, ಜನರ ಆತಂಕವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ತಿಳಿಸಿದರು.
ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವುದರೊಂದಿಗೆ ಜನಸಾಮಾನ್ಯರು ಹಾಗೂ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಸ್ತೂರಿರಂಗನ್ ವರದಿ ಅನುಷ್ಠಾನದ ಕುರಿತು ರಾಜ್ಯ ಹಾಗೂ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜನವಸತಿ ಇರುವ ಗ್ರಾಮಗಳನ್ನು ಕಸ್ತೂರಿರಂಗನ್ ವರದಿಯ ವ್ಯಾಪ್ತಿಯಿಂದ ಸಂಪೂರ್ಣವಾಗಿ ಹೊರಗಿಡಬೇಕು ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಯಿತು. ಈ ಸಂಬಂಧ ಅಗತ್ಯವಿರುವ ನಿಯೋಗವನ್ನು ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯವರ ಬಳಿಗೆ ಕೊಂಡೊಯ್ದು ಕೊಡಗಿನ ಜನರ ಅಭಿಪ್ರಾಯ ಮತ್ತು ಆತಂಕವನ್ನು ಮನವರಿಕೆ ಮಾಡಿಕೊಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕೊಡಗಿನ ಭೌಗೋಳಿಕ ಪರಿಸ್ಥಿತಿ, ಜನವಸತಿ ಹಾಗೂ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ನಿರ್ಧಾರ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಯಿತು.









