ಮಡಿಕೇರಿ, NEWS DESK ಸೆ.5: ಬೆಂಗಳೂರಿನಿಂದ ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಮೈಸೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಹುಣಸೂರು ತಾಲೂಕಿನ ರಂಗಯ್ಯನಕೊಪ್ಪಲು ಬಳಿ ಶನಿವಾರ ಸಂಜೆ ನಡೆದಿದೆ.
ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿದಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯ ಸಂಭವಿಸಿಲ್ಲ. ಆದರೆ ಕೆಲ ಪ್ರಯಾಣಿಕರ ಲಗ್ಗೇಜ್ ಬ್ಯಾಗ್‌ಗಳನ್ನು ಬಸ್‌ನಿಂದ ಹೊರತೆಗೆಯಲು ಸಾಧ್ಯವಾಗದೆ, ಅವುಗಳಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಘಟನೆ ತಿಳಿಯುತ್ತಿದ್ದಂತೆ ಬಿಳಿಕೆರೆ ಠಾಣೆಯ ಇನ್ಸ್‌ಪೆಕ್ಟರ್ ಪುನೀತ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಿಕೊಟ್ಟು, ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಲಾಯಿತು. ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲಹೊತ್ತು ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಇದರಿಂದ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತವನ್ನು ತಪ್ಪಿಸಲಾಯಿತು.
ಬಸ್‌ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.








