
ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದ ಸಂವಿಧಾನಕ್ಕೆ ಗೌರವ ನೀಡದ ವ್ಯಕ್ತಿಯೊಬ್ಬ ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾನ್ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ವಿಡಿಯೋ ಮೂಲಕ ಅಗೌರವದ ಮಾತುಗಳನ್ನಾಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದು ಖಂಡನೀಯ. ಇಂತಹ ಕೃತ್ಯಗಳು ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ಅವರ ವಿರುದ್ಧ ಕೀಳುಮಟ್ಟದ ಭಾಷೆ ಬಳಸಲಾಗಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿಶೇಷ ಶಕ್ತಿ ತುಂಬಿರುವ ಡಾ.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಉಲ್ಲೇಖಿಸಿರುವ ಮೀಸಲಾತಿಯ ಅಂಶಗಳನ್ನು ಟೀಕಿಸಿರುವುದಲ್ಲದೆ, ಅಂಬೇಡ್ಕರ್ ಅವರ ಬೆಂಬಲಿಗರನ್ನು ಅವಮಾನಿಸಲಾಗಿದೆ. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಮಹನೀಯರನ್ನು ಅವಮಾನಿಸುವ ಹಾಗೂ ಸಮಾಜದ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಮಂಡ್ಯದವನೆಂದು ಹೇಳಲಾದ ಈ ಆರೋಪಿಯನ್ನು ತಕ್ಷಣ ಪತ್ತೆಹಚ್ಚಿ ಬಂಧಿಸಬೇಕು ಎಂದು ಗಾಯತ್ರಿ ನರಸಿಂಹ ಒತ್ತಾಯಿಸಿದ್ದಾರೆ. ಡಾ.ಅಂಬೇಡ್ಕರ್ ಅವರ ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ.









