
ಗೋಣಿಕೊಪ್ಪ, NEWS DESK ಸೆ.14 : ಕಾವೇರಿ ದಸರಾ ಸಮಿತಿಯ ವತಿಯಿಂದ ಗೋಣಿಕೊಪ್ಪ ದಸರಾ ಉತ್ಸವದ ಪೂರ್ವಭಾವಿ ಸಭೆ ಪೊನ್ನಂಪೇಟೆ ತಾಲ್ಲೂಕಿನ ಜೋಡುಬಟ್ಟಿ ಭಾಗದಲ್ಲಿರುವ ಶ್ರೀ ಭಗವತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಾವೇರಿ ದಸರಾ ಸಮಿತಿ ಅಧ್ಯಕ್ಷರು, ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿ ದಸರಾ ಉತ್ಸವದ ಸಿದ್ಧತೆಗಳ ಕುರಿತು ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಈ ಬಾರಿ ಗೋಣಿಕೊಪ್ಪ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಹೆಚ್ಚಿನ ಅನುದಾನ ದೊರೆತಿದೆ. ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗೋಣಿಕೊಪ್ಪ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ಆಚರಿಸಲು ಅಗತ್ಯ ಕಾರ್ಯತಂತ್ರಗಳನ್ನು ರೂಪಿಸಿ ಸಿದ್ಧರಾಗಬೇಕು ಎಂದು ಸಲಹೆ ನೀಡಿದರು. ದಸರಾ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರಮೋದ್ ಗಣಪತಿ ಹಾಗೂ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಪ್ರಮುಖರಾದ ಅಜಿತ್ ಅಯ್ಯಪ್ಪ, ಮಂಜುಳಾ, ಸಾಜಿ ಅಚ್ಚುತನ್, ಚೇತನ್ ಸೇರಿದಂತೆ ದಸರಾ ಸಮಿತಿಯ ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.









