ಮಡಿಕೇರಿ, NEWS DESK ಸೆ.18: ವಿದ್ಯಾರ್ಥಿ ಜೀವನವು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಮಹತ್ತರವಾದ ಸಮಯವಾಗಿದ್ದು, ವಿದ್ಯಾರ್ಥಿಗಳು ತಮಗೆ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮದ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದ ಮಹತ್ವ, ದೊರೆಯುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ವಿಧಾನ ಹಾಗೂ ವಿದ್ಯಾರ್ಥಿ ಸಂಘದ ಪಾತ್ರದ ಕುರಿತು ಮಾಹಿತಿ ನೀಡಿದರು.
ವಿದ್ಯಾರ್ಥಿ ಸಂಘದ ಚಟುವಟಿಕೆಗಳ ಮೂಲಕ ನಾಯಕತ್ವ, ಸಂಘಟನಾ ಸಾಮರ್ಥ್ಯ ಹಾಗೂ ಸಾಮಾಜಿಕ ಜವಾಬ್ದಾರಿಯ ಗುಣಗಳನ್ನು ಬೆಳೆಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ನವೀನ್ ಅಂಬೆಕಲ್ಲು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟೇಶ ಪ್ರಸನ್ನ ಪಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕಿ ಡಾ. ಚೈತ್ರ ಎಸ್.ಜಿ. ಹಾಗೂ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕ ನವೀನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ರೂಪುಗೊಂಡ ಕಾಲೇಜಿನ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ದೀಕ್ಷಿತಾ ವರ್ಕಾಡಿ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಧನರಾಜ್ ಕುಮಾರ್ ಅವರು ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕಿ ಸುಪ್ರಿಯಾ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ಉದಯ್ ಕುಮಾರ್ ವಂದಿಸಿದರು. ವಿದ್ಯಾರ್ಥಿನಿ ಜಸ್ಮಿತಾ ಹಾಗೂ ತಂಡದವರು ಪ್ರಾರ್ಥಿಸಿದರು.







