
ಮಡಿಕೇರಿ ಸೆ.19 NEWS DESK : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಕಡಿಮೆ ಮಳೆ ಆಗಿರುವ ಹಿನ್ನೆಲೆ ವಿರಾಜಪೇಟೆ, ಸೋಮವಾರಪೇಟೆ ಮತ್ತು ಪೊನ್ನಂಪೇಟೆಯನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಶನಿವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಎಲ್-ನಿನೋ ಪರಿಣಾಮದಿಂದ ಈ ಬಾರಿ ಮುಂಗಾರು ಕೈಕೊಟ್ಟಿರುವ ಹಿನ್ನೆಲೆ ಶೇ.33 ರಿಂದ 50 ರಷ್ಟು ಕಡಿಮೆ ಮಳೆಯಾಗಿರುವ ತಾಲ್ಲೂಕುನ್ನು ಬರ ಪೀಡಿತವೆಂದು ಸರ್ಕಾರ ಪ್ರಕಟಿಸಿದ್ದು, ಈ ಹಿನ್ನೆಲೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಒದಗಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ಎಂಜಿನಿಯರ್ಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಾಕೀತು ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಡಾ.ಲಿಂಗರಾಜು ದೊಡ್ಡಮನಿ ಅವರು ಈಗಾಗಲೇ ಜಾನುವಾರುಗಳಿಗೆ ಮೇವು ದಾಸ್ತಾನು ಇದ್ದು, 46 ವಾರಗಳ ಕಾಲ ಬರುವಷ್ಟು ಮೇವು ದಾಸ್ತಾನು ಇದೆ ಎಂದು ಮಾಹಿತಿ ನೀಡಿದರು. ಕೊಡಗು ಜಿಲ್ಲೆಗೆ 2340 ಮೇವಿನ ಬೀಜದ ಕಿಟ್ಟು ವಿತರಿಸಲು ಹಂಚಿಕೆ ಆಗಿದ್ದು, ಶೀಘ್ರದಲ್ಲಿ ಮೇವಿನ ಬೀಜದ ಕಿಟ್ಟನ್ನು ವಿತರಿಸಲಾಗುತ್ತದೆ ಎಂದು ಡಾ.ಲಿಂಗರಾಜು ದೊಡ್ಡಮನಿ ಅವರು ವಿವರಿಸಿದರು. ಹಾಲು ಕರೆಯುವ ಹಸುಗಳಿಗೆ ಹೆಚ್ಚು ಪ್ರೋಟೀನ್ ಯುಕ್ತ ಮೇವು ನೀಡುವಲ್ಲಿ ಅಜೋಲ ಬೆಳೆಸಲು 250 ರೈತರಿಗೆ ಪ್ರೋತ್ಸಾಹ ನೀಡಲಾಗುತ್ತದೆ. ಜತೆಗೆ ಹಾಲು ಒಕ್ಕೂಟದಿಂದ ಸಹ ಮೇವಿನ ಬೀಜದ ಕಿಟ್ಟನ್ನು ವಿತರಿಸಲು ಕ್ರಮವಹಿಸಲಾಗುತ್ತದೆ ಎಂದು ಪಶುಪಾಲನೆ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು. ಮುಂಗಾರು ಸಂದರ್ಭದಲ್ಲಿ ಸರಿಯಾದ ಸಮಯದಲ್ಲಿ ಮಳೆಯಾಗದೆ ಮುಸುಕಿನ ಜೋಳ ಮತ್ತು ಭತ್ತ ಬೆಳೆ ಹಾನಿಯಾಗಿದ್ದು, ಸೋಮವಾರಪೇಟೆ ತಾಲ್ಲೂಕಿನಲ್ಲಿ 159 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ, ವಿರಾಜಪೇಟೆ ತಾಲ್ಲೂಕಿನಲ್ಲಿ 650 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಗೂ ಪೊನ್ನಂಪೇಟೆ ತಾಲ್ಲೂಕಿನಲ್ಲಿ 1470 ಹೆಕ್ಟೇರ್ ಪ್ರದೇಶದಲ್ಲಿ ಒಟ್ಟು 2,279 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು 1.93 ಕೋಟಿ ರೂ. ಇನ್ಫುಟ್ ಸಬ್ಸಿಡಿ ಬಿಡುಗಡೆಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಅವರು ಮಾಹಿತಿ ನೀಡಿದರು. ಸತತ ಮೂರು-ನಾಲ್ಕು ವಾರಗಳ ಕಾಲ ಮಳೆ ಆಗದಿದ್ದಲ್ಲಿ, ಹಾಗೆಯೇ ಮಣ್ಣಿನ ತೇವಾಂಶ ಆಧಾರದ ಮೇಲೆ ಮಾಡರೇಟ್ ಅಂತರ್ಜಲ ಮಟ್ಟವನ್ನು ಗಮನಿಸಿ ಬೆಳೆ ಹಾನಿ ಬಗ್ಗೆ ನಿರ್ಧರಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದರು. ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಲಜೀವನ್ ಮಿಷನ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಅವರು ಜಿಲ್ಲೆಯಲ್ಲಿ ಡಿಸೆಂಬರ್ವರೆಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ತೊಂದರೆಯಿಲ್ಲ ಎಂದು ಮಾಹಿತಿ ನೀಡಿದರು. ಸರ್ಕಾರದಿಂದ ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಂದು ಕೋಟಿ ರೂ. ಬಿಡುಗಡೆ ಮಾಡಿದ್ದು, ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ಸಮಸ್ಯೆ ಉಂಟಾಗದಂತೆ ಗಮನಹರಿಸಲಾಗುವುದು ಎಂದು ಭಾಸ್ಕರ್ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಈಗಾಗಲೇ ಮಾಧ್ಯಮಗಳಲ್ಲಿ ಜಲಮೂಲಗಳು ಬತ್ತಿ ಹೋಗುತ್ತಿವೆ ಎಂಬ ವರದಿಗಳು ಬರುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಕುಡಿಯುವ ನೀರಿನ ಅಭಾವ ಕಂಡು ಬಂದಿರುವ ಹಾಗೂ ಕಂಡು ಬರಬಹುದಾದ ಗ್ರಾಮಗಳಲ್ಲಿ ಪರ್ಯಾಯವಾಗಿ ಹತ್ತಿರದಲ್ಲಿರುವ ಹೆಚ್ಚು ನೀರು ಇಳುವರಿ ಹಾಗೂ ಗುಣಮಟ್ಟದ ಕೊಳವೆ ಬಾವಿಗಳನ್ನು ಗುರುತಿಸಿ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಗ್ರಾಮೀಣ ಪ್ರದೇಶದ ಜೊತೆಗೆ ನಗರ, ಪಟ್ಟಣ ಪ್ರದೇಶಗಳಲ್ಲಿಯೂ ಸಹ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್ ಅವರು ಮಾಹಿತಿ ನೀಡಿ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು. ಜಿಲ್ಲಾಧಿಕಾರಿ ಸೋಮಶೇಖರ್ ಅವರು ಮಾತನಾಡಿ ಪಶುಪಾಲನೆ, ಕೃಷಿ, ಕುಡಿಯುವ ನೀರು ಎಂಜಿನಿಯರ್ ವಿಭಾಗ, ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಗಳು ತಮ್ಮ ಹಂತದಲ್ಲಿ ಬರ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಎದುರಿಸಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.










